5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು:ಹೈಕೋರ್ಟ್ ತೀರ್ಪು

ರಾಜ್ಯ

ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ. ಹೈಕೋರ್ಟ್‌ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ನೇತೃತ್ವದ ಏಕ ಸದಸ್ಯ ಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಪಬ್ಲಿಕ್ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ ನಡೆಸುವ ರಾಜ್ಯ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.ಆದೇಶ ಈ ವರ್ಷಕ್ಕೆ ಮಾತ್ರ ಅನ್ವಯ. ಈ ವರ್ಷ ಮಾತ್ರ ಬೋರ್ಡ್ ಎಕ್ಸಾಂ ರದ್ದುಪಡಿಸಲಾಗಿದೆ. ಮುಂದಿನ ವರ್ಷ ಎಲ್ಲಾ ನಿಯಮಗಳನ್ನು ಪಾಲಿಸಿ. ಪೋಷಕರ ಅಭಿಪ್ರಾಯವನ್ನು ಪಡೆದು,ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮವಾಗಿ ನಿರ್ಧರಿಸಿ ಎಂದು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.

2022-23ನೇ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಂಘವು ತಕರಾರು ಅರ್ಜಿ ಸಲ್ಲಿಸಿತ್ತು. 5, 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸದಂತೆ ಕ್ರಮವಹಿಸಲು ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷರು ಮೇಲ್ಮನವಿ ಸಲ್ಲಿಸಿದ್ದರು