ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಕಾರ್ಯಕರ್ತರಿಂದ ಅಭಿಪ್ರಾಯ ಪಡೆಯುವ ವಿನೂತನ ಪ್ರಯತ್ನವನ್ನು ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿ ಜಾರಿಗೆ ತಂದಿದ್ದು, ಎಲ್ಲ ಜಿಲ್ಲೆಗಳಲ್ಲೂ ಶುಕ್ರವಾರ ಈ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಜಿಲ್ಲಾ ಕೋರ್ ಕಮಿಟಿ ಸಭೆ ನಡೆಸಲಾಗಿದೆ.
ರಾಜ್ಯದ 224 ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ ಬಿಜೆಪಿ ಈ ಪ್ರಕ್ರಿಯೆ ನಡೆಸಿದ್ದು ಪ್ರತಿ ಕ್ಷೇತ್ರದಿಂದ ಸುಮಾರು 200 ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಇದರ ಆಧಾರದ ಮೇಲೆ ಟಿಕೆಟ್ ಹಂಚಿಕೆ ಪ್ರಕ್ರಿಯೆಯನ್ನು ದಿಲ್ಲಿಯಲ್ಲಿ ನಡೆಯುವ ಸಂಸದೀಯ ಮಂಡಳಿ ಸಭೆಯಲ್ಲಿ ನಡೆಸಲಿದ್ದು, ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ ದೊರೆಯುವುದೇ ಎಂಬ ಪ್ರಶ್ನೆಗೆ ಇನ್ನು ಕೆಲವೇ ದಿನಗಳಲ್ಲಿ ಬಿಜೆಪಿ ವರಿಷ್ಠರು ಉತ್ತರ ನೀಡಲಿದ್ದಾರೆ.
ಬಿಜೆಪಿ ಕೋರ್ ಕಮಿಟಿ ಸದಸ್ಯರು, ಸಂಸದರು ಹಾಗೂ ಪಕ್ಷದಿಂದ ನಿಯೋಜನೆಗೊಂಡ ಒಬ್ಬ ಸದಸ್ಯರ ಸಮ್ಮುಖದಲ್ಲಿ ಈ ಸಭೆ ನಡೆದಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡಿರುವುದು ಕೇಸರಿ ಪಡೆಯ ತಳಹಂತದ ಮುಖಂಡರಲ್ಲಿ ಉತ್ಸಾಹ ಮೂಡಿಸಿದೆ.ಬೂತ್ ಸದಸ್ಯರು, ಶಕ್ತಿ ಕೇಂದ್ರ ಪ್ರಮುಖರು, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಂಡಲ ಕೋರ್ ಕಮಿಟಿ ಸದಸ್ಯರು, ಮಂಡಲ ಪದಾಧಿಕಾರಿಗಳು, ಮಂಡಲ ಮೋರ್ಚಾ ಅಧ್ಯಕ್ಷರು, ಪುರಸಭೆ, ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ಕ್ಷೇತ್ರವಾರು ಪಕ್ಷದ ಜವಾಬ್ದಾರಿ ಹೊಂದಿರುವ 200 ಜನರಿಂದ ಪ್ರತಿ ಕ್ಷೇತ್ರದಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ.
ಎಪ್ರಿಲ್ 4ಕ್ಕೆ ದಿಲ್ಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಎಪ್ರಿಲ್ 6 ಅಥವಾ 7ಕ್ಕೆ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಎ.10ರೊಳಗೆ ಎಲ್ಲ ಕ್ಷೇತ್ರದ ಹುರಿಯಾಳುಗಳ ಹೆಸರನ್ನು ಬಿಜೆಪಿ ವರಿಷ್ಠರು ಅಂತಿಮಗೊಳಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಾರದೊಳಗೆ ಅಂತಿಮಗೊಳ್ಳಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಗೆ ತಂಡಗಳನ್ನು ಕಳುಹಿಸಿ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಆ ಬಳಿಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.