ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಾಕಿ ಉಳಿಸಿಕೊಂಡಿರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಂಬಂಧ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯ ಸಭೆಯು ದಿಲ್ಲಿಯಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ನಡೆಯಲಿದೆ.ಸಭೆ ಹಿನ್ನೆಲೆಯಲ್ಲಿ ಸೋಮ ವಾರವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್ ಅವರು ದಿಲ್ಲಿ ತಲುಪಿದ್ದು ಟಿಕೆಟ್ ಆಕಾಂಕ್ಷಿಗಳ ದಂಡೇ ದಿಲ್ಲಿಗೆ ದೌಡಾಯಿಸಿದೆ. ಮೊದಲ ಹಂತದಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಈಗ ಬಾಕಿ 100 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವುದಕ್ಕೆ ಮುಂದಾಗಿದೆ.
ಈ ಸಂಬಂಧ ಈಗಾಗಲೇ ಸ್ಕ್ರೀನಿಂಗ್ ಕಮಿಟಿಯು ಹಲವು ಸುತ್ತಿನ ಸಭೆ ಸೇರಿ ಟಿಕೆಟ್ ಆಕಾಂಕ್ಷಿಗಳ ಜತೆ ಸಭೆಯನ್ನೂ ನಡೆಸಿ ಬಹುತೇಕ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಆದರೆ ಹಲವು ಕಡೆ ಒಂದಕ್ಕಿಂತ ಹೆಚ್ಚು ಪ್ರಬಲ ಟಿಕೆಟ್ ಆಕಾಂಕ್ಷಿಗಳಿರುವುದು ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ಬಹುತೇಕ ಮಂಗಳವಾರದ ಸಭೆಯ ಬಳಿಕ ಇದೇ 6 ಅಥವಾ 7ರಂದು 65 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ. ಆಯ್ಕೆ ತೀವ್ರ ಕಗ್ಗಂಟಾಗಿರುವ ಉಳಿದ 35 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮತ್ತಷ್ಟು ವಿಳಂಬವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.