ಭ್ರಷ್ಟಾಚಾರ ಆರೋಪ ಹೊತ್ತಿರುವ ಪಿಡಿಒಗಳ ವಿರುದ್ಧ ತನಿಖೆ ತೀವ್ರಗೊಳಿಸಿ: ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯ

ಆಯಾ ಜಿಲ್ಲಾ ಕೇಂದ್ರಗಳಲ್ಲಿರುವ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಕ ಅಧಿಕಾರಿ(ಸಿಇಒ)ಗಳು ಗ್ರಾಮ ಮಟ್ಟದಲ್ಲಿ ಕಡ್ಡಾಯ ವೈಯಕ್ತಿಕ ಪರಿಶೀಲನೆ, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ತೀವ್ರಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ಸಿಇಒಗಳು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ನಡುವಿನ ಸಮನ್ವಯತೆ ಹೆಚ್ಚಿಸಲು ಇಲಾಖಾ ವತಿಯಿಂದಲೇ ಪ್ರತಿ ಹದಿನೈದು ದಿನಕ್ಕೊಮ್ಮೆ ಸಮನ್ವಯ ಸಭೆಗಳನ್ನು ನಡೆಸಲು ನಿರ್ದೇಶನ ನೀಡಿ ಇದನ್ನು ಸಾರ್ವಕಾಲಿಕ ಕಾರ್ಯಕ್ರಮವಾಗಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲೆಗಳಲ್ಲಿ ಕಾರ್ಯಗತಗೊಳ್ಳುತ್ತಿರುವ ಕಾರ್ಯಕ್ರಮಗಳನ್ನು ಜನರಿಗೆ ಸಮರ್ಥವಾಗಿ ಮುಟ್ಟಿಸಲು ಸರಕಾರ ಕೈಗೊಳ್ಳಬೇಕಾಗಿರುವ ಕ್ರಮಗಳು, ಜನಸ್ನೇಹಿ ಆಡಳಿತಕ್ಕೆ ಕಂಟಕವಾಗಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಜರುಗಿಸಬೇಕಾದ ಕ್ರಮಗಳ ಕುರಿತು ಸಲಹೆಗಳನ್ನು ಪಡೆಯಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.