ಗೃಹಲಕ್ಷ್ಮೀ ಯೋಜನೆ: ನಿಗದಿತ ದಿನಾಂಕದಂದು ಮಾತ್ರ ನೋಂದಣಿ ಕೇಂದ್ರಕ್ಕೆ ತೆರಳಿ ನೋಂದಣಿ; ಒಂದು ಕೇಂದ್ರದಲ್ಲಿ ದಿನ 60 ಅರ್ಜಿ ಮಾತ್ರ ಸ್ವೀಕಾರ

ರಾಜ್ಯ

ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿಯಾಗ ಬಯಸುವ ಪಡಿತರ ಚೀಟಿ ಹೊಂದಿದ ಕುಟುಂಬದ ಯಜಮಾನಿ ಮಹಿಳೆಯರು ತಮ್ಮ ನೋಂದಾಯಿತ ದೂರವಾಣಿ ಸಂಖ್ಯೆಗೆ ಕಳುಹಿಸಲಾಗುವ ಎಸ್.ಎಂ.ಎಸ್.ನಲ್ಲಿ ತಿಳಿಸಿದ ದಿನಾಂಕದಂದು ಮಾತ್ರ ನಿಗದಿತ ನೋಂದಣಿ ಕೇಂದ್ರಕ್ಕೆ ತೆರಳಿ ನೋಂದಣಿ ಮಾಡಿಸಬಹುದು।

ಗೃಹಲಕ್ಷ್ಮಿ ಯೋಜನೆಗೆ ಜುಲೈ 19ರಂದು ಮುಖ್ಯಮಂತ್ರಿಗಳು ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದ್ದಾರೆ. ಉಪ ಮುಖ್ಯಮಂತ್ರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಯೋಜನೆಗೆ ಸಂಬಂಧಿಸಿದಂತೆ ಹಲವು ಮಾರ್ಗದರ್ಶನಗಳನ್ನು ನೀಡಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಯಶಸ್ವಿಯಾಗಬೇಕೆಂಬ ಸೂಚನೆ ನೀಡಿದ್ದಾರೆ.

ಅಂತ್ಯೋದಯ, ಎಪಿಎಲ್, ಬಿಪಿಎಲ್ ಪಡಿತರ ಚೀಟಿ ಹೊಂದಿದ ಕುಟುಂಬದ ಯಜಮಾನಿ ಮಹಿಳೆಯರಿಗೆ ಮಾಸಿಕ ರೂ.2000 ಗಳಂತೆ ಪ್ರತಿ ತಿಂಗಳು,ಬ್ಯಾಂಕಿನಲ್ಲಿ ಕೆವೈಸಿ ಆಗಿರುವ, ಆಧಾರ್ ಲಿಂಕ್ ಆಗಿರುವ ಫಲಾನುಭವಿಗಳ ಬ್ಯಾಂಕ್ ಖಾತೆಗೆ ರೂ.2,000 ಜಮೆಯಾಗಲಿದೆ.ಕುಟುಂಬದ ಯಜಮಾನಿ ಮಹಿಳೆಯರಿಗೆ ನೋಂದಣಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಎಸ್‍ಎಂಎಸ್ ರವಾನಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ನೋಂದಣಿ ಉಚಿತವಾಗಿದ್ದು, ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಒಂದು ಕೇಂದ್ರದಲ್ಲಿ ದಿನ ಒಂದಕ್ಕೆ 60 ಅರ್ಜಿಗಳನ್ನು ಮಾತ್ರ ಸ್ವೀಕರಿಸಬಹುದಾಗಿದ್ದು, ಯಜಮಾನಿ ಮಹಿಳೆಯರು ತಮಗೆ ಕಳುಹಿಸಲಾದ ಮೆಸೇಜ್‍ನಲ್ಲಿ ತಿಳಿಸಲಾದ ದಿನಾಂಕದಂದು ಮಾತ್ರ ನಿಗದಿತ ನೋಂದಣಿ ಕೇಂದ್ರಕ್ಕೆ ತೆರಳಿ ನೋಂದಣಿ ಮಾಡಿಸಬಹುದಾಗಿದೆ.
ನೋಂದಣಿ ವೇಳಾಪಟ್ಟಿಯು ಪಡಿತರ ಚೀಟಿ ವಿಳಾಸಕ್ಕೆ ಸಮೀಪವಿರುವ ಕೇಂದ್ರದಲ್ಲಿರುತ್ತದೆ ಹಾಗೂ ಅರ್ಜಿ ನೋಂದಾಯಿಸುವ ಸಂದರ್ಭದಲ್ಲಿ ಪಡಿತರ ಚೀಟಿ,ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಆಧಾರ್ ನೋಂದಾಯಿತ ಮೊಬೈಲ್ ಫೋನ್ ತೆಗೆದುಕೊಂಡು ಹೋಗಬೇಕು.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಸಂಬಂಧ ಯಾವುದೇ ಮಾಹಿತಿ ಅಗತ್ಯವಿದ್ದಲ್ಲಿ ರಾಜ್ಯ ಮಟ್ಟದ ಉಚಿತ ಸಹಾಯವಾಣಿ 1902 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿರುತ್ತದೆ ಎಂದು ಮಾಹಿತಿ ನೀಡಲಾಗಿದೆ.