‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ವೇಳೆ ಮಹಿಳೆಯರಿಂದ ಯಾವುದೇ ರೀತಿಯ ಶುಲ್ಕ ಪಡೆಯುವ ಹಾಗಿಲ್ಲ

ರಾಜ್ಯ

‘ಗೃಹಲಕ್ಷ್ಮಿ’ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಹಣ ಪಡೆದ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದು ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ನಡೆದಿದೆ.

‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ವೇಳೆ ಮಹಿಳೆಯರಿಂದ ಯಾವುದೇ ರೀತಿಯ ಶುಲ್ಕ ಪಡೆಯುವ ಹಾಗಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೆ ಗ್ರಾಮ ಒನ್ ಸಿಬ್ಬಂದಿ ದಾನಯ್ಯ ಮಹಿಳೆಯರಿಂದ ಹಣ ಪಡೆಯುತ್ತಿದ್ದಾರೆ ಎಂಬ ದೂರು ಬಂದಿತ್ತು. ಈ ಹಿನ್ನೆಲೆ ಅಧಿಕಾರಿಗಳು ಸಿಬ್ಬಂದಿಯ ಲಾಗಿನ್ ಐಡಿ ರದ್ದು ಮಾಡಿದ್ದಾರೆ. ಬಾಗಲಕೋಟೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಾರ್ವಜನಿಕರ ದೂರಿನ ಮೇರೆಗೆ ಬಾಗಲಕೋಟೆ ಜಿಲ್ಲಾಡಳಿತವು ಈ ಕ್ರಮ ಕೈಗೊಂಡಿದೆ. ಅದೇ ರೀತಿ ನಂದಗಾಂವ ಗ್ರಾಮ ಒನ್ ಕೇಂದ್ರದ ಸಿಬ್ಬಂದಿ ಸಿದ್ದಪ್ಪ ಪೂಜಾರಿ ಲಾಗಿನ್ ಐಡಿ ಸಹ ರದ್ದು ಮಾಡಲಾಗಿದೆ. ಹಣ ಕೇಳಿದ್ದಕ್ಕೆ ಸಿದ್ದಪ್ಪ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿದ್ದರು. ಇದರ ವಿಡಿಯೋ ಆಧರಿಸಿ ಐಡಿ ರದ್ದುಗೊಳಿಸಲು ಜಿಲ್ಲಾಧಿಕಾರಿಯವರು ಸೂಚಿಸಿದ್ದರು.

ಪಡಿತರ ಚೀಟಿಯಲ್ಲಿ ‘ಯಜಮಾನಿ ಮಹಿಳೆ’ ಎಂದು ಗುರುತಿಸಿರುವ ಮಹಿಳೆ ಗೃಹ ಲಕ್ಷ್ಮೀ ಯೋಜನೆಗೆ ಅರ್ಹರಾಗಿದ್ದಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ ಪಾವತಿದಾರರಾಗಿದಲ್ಲಿ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ. ಇನ್ನು ಲಿಂಗತ್ವ ಅಲ್ಪಸಂಖ್ಯಾತರು ಯೋಜನೆಯ ಲಾಭ ಪಡೆಯಲು ಅರ್ಹರಾಗಿದ್ದಾರೆ.

ಫಲಾನುಭವಿ ನೋಂದಣಿ ಪ್ರಕ್ರಿಯೆ ಎರಡು ವಿಧಾನದ ಮೂಲಕ ಮಾಡಲಾಗುತ್ತಿದೆ. ಮೊದಲನೆಯದಾಗಿ ಈಗಾಗಲೇ ಪಡಿತರ ಚೀಟಿಯಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಯ ಮೊಬೈಲ್ ಸಂಖ್ಯೆಗೆ ನೋಂದಣಿ ದಿನಾಂಕ, ಸಮಯ ಹಾಗೂ ನೋಂದಣಿ ಕೇಂದ್ರದ ವಿವರಗಳನ್ನು ಎಸ್.ಎಂ.ಎಸ್ ಮೂಲಕ ತಿಳಿಸಲಾಗುತ್ತದೆ. ಇದಲ್ಲದೆ ಟೋಲ್ ಫ್ರೀ ಸಂಖ್ಯೆ 1902 ಗೆ ಕಾಲ್ ಮಾಡಿ ಅಥವಾ 8147500500 ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮೂಲಕ ಸಂದೇಶ ಕಳುಹಿಸಿ ನೋಂದಣಿ ಕುರಿತು ಮಾಹಿತಿ ಪಡೆಯಬಹುದಾಗಿದೆ.