ಕಾಂಗ್ರೆಸ್​ ಸರ್ಕಾರದಲ್ಲಿ ಭುಗಿಲೆದ್ದ ಅಸಮಾಧಾನ, ಒಮ್ಮತವಿಲ್ಲದ ಶಾಸಕರು-ಮಂತ್ರಿಗಳು, ಜುಲಾಯಿ 27ಕ್ಕೆ ಸಿಎಲ್‌ಪಿ ಸಭೆ

ರಾಜ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೆಲವೇ ತಿಂಗಳುಗಳು ಕಳೆದಿದೆ,ಈ ನಡುವೆ ಪಕ್ಷದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ.ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ​ ಶಾಸಕರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಸಚಿವರು ದುರ್ನಡತೆ ತೋರುತ್ತಿದ್ದು, ಬುದ್ದಿ ಹೇಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ದೂರು ನೀಡಿದ್ದಾರೆ. ಅಲ್ಲದೆ, ಕೂಡಲೇ ಶಾಸಕಾಂಗ ಸಭೆ ಕರೆಯುವಂತೆಯೂ ಆಗ್ರಹಿಸಿದ್ದಾರೆ.

ಕಳೆದ ಶಾಸಕಾಂಗ ಸಭೆಯಲ್ಲೇ ಅಸಮಾಧಾನ ಸ್ಫೋಟಗೊಂಡಿತ್ತು. ಸಚಿವರು ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದಾರೆ ಎಂದು ಶಾಸಕಾಂಗ ಸಭೆಯಲ್ಲೇ ಬೇಸರ ಹೊರಹಾಕಿದ್ದ ಶಾಸಕರು,ಇದೀಗ ಸಚಿವರ ವರ್ತನೆ ಬದಲಾಗದ ಹಿನ್ನೆಲೆಯಲ್ಲಿ ನೇರವಾಗಿ ಸಿಎಂಗೆ ದೂರು ನೀಡಿದ್ದಾರೆ. ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ ಪತ್ರ ಬರೆದು ಶಾಸಕಾಂಗ ಸಭೆಗೆ ಆಗ್ರಹಿಸಲಾಗಿದೆ.20ಕ್ಕೂ ಹೆಚ್ಚು ಹಿರಿಯ ಶಾಸಕರು ಪತ್ರಕ್ಕೆ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆಂದು ತಿಳಿದುಬಂದಿದೆ.

ಅತೃಪ್ತರ ಅಹವಾಲು ಆಲಿಸಲು ಜುಲೈ.27ರಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ.ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಹಾಗೂ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‌ಪಿ ಸಭೆ ನಡೆಯಲಿದ್ದು, ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನ ಪರಿಷತ್‌ ಸಭಾನಾಯಕ ಎನ್‌.ಎಸ್‌. ಬೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.ಶಾಸಕರ ಅಹವಾಲು ಜೊತೆಗೆ ಈಗಾಗಲೇ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳ ಪರಾಮರ್ಶೆ, ನಿಗಮ– ಮಂಡಳಿ, ಪ್ರಾಧಿಕಾರಗಳಿಗೆ ನೇಮಕ, ವಿಧಾನಸಭೆ ಅಧಿವೇಶನದಲ್ಲಿ ನಡೆದ ಚರ್ಚೆ, ಪಕ್ಷದ ವಿರುದ್ಧದ ಬಿಜೆಪಿ– ಜೆಡಿಎಸ್‌ ಜಂಟಿ ಹೋರಾಟವನ್ನು ಎದುರಿಸಲು ರೂಪಿಸಬೇಕಾದ ಕಾರ್ಯತಂತ್ರ, ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆ ಮುಂತಾದ ವಿಷಯಗಳ ಕುರಿತಂತೆಯೂ ಸಭೆಯಲ್ಲಿ ಚರ್ಚೆಗೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.