2024ರ ಲೋಕಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ ಏಳು ತಿಂಗಳಷ್ಟೆ, ಈಗಾಗಲೇ ಕಾಂಗ್ರೆಸ್‌ನಲ್ಲಿ ಲೋಕಸಭೆ ಟಿಕೆಟ್‌ಗಾಗಿ ತೀವ್ರ ಲಾಬಿ ನಡೆಯುತ್ತಿದೆ, ಕಳೆದ ಮೇ ತಿಂಗಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಲಾಬಿ ಜೋರಾಗಿದೆ.
ಬೆಂಗಳೂರು ಕೇಂದ್ರ ಭಾಗದಿಂದ ಮಾಜಿ ಸಚಿವ ಎಚ್‌ಎಂ ರೇವಣ್ಣ ಹಾಗೂ ಮಹಮ್ಮದ್ ನಲಪಾಡ್ ತೀವ್ರ ಪೈಪೋಟಿ ನಡೆಸುತ್ತಿದ್ದರೆ, ಮಾಜಿ ಸಂಸದ ವಿಎಸ್ ಉಗ್ರಪ್ಪ ಬಳ್ಳಾರಿ ಕ್ಷೇತ್ರಕ್ಕೆ ತೀವ್ರ ಲಾಬಿ ನಡೆಸುತ್ತಿದ್ದಾರೆ.ಬೆಳಗಾವಿ ಕ್ಷೇತ್ರಕ್ಕೂ ಹೆಚ್ಚಿನ ಬೇಡಿಕೆ ಇದೆ. ಈ ಬಾರಿ ಪಕ್ಷ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮೈಸೂರಿನಿಂದ ಯತೀಂದ್ರ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿಯುವ ಸಾಧ್ಯತೆ ಇದೆ।
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲಬುರಗಿಯ ಜೊತೆಗೆ ಕೋಲಾರವನ್ನು ಎರಡನೇ ಸ್ಥಾನವಾಗಿ ಆಯ್ಕೆ ಮಾಡಬಹುದು. ಸಚಿವರಾಗಿರುವ ಕೋಲಾರದ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಕ್ಷೇತ್ರದಿಂದ ಸ್ಪರ್ಧಿಸಲು ಖರ್ಗೆ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ತುಮಕೂರಿನಲ್ಲಿ ಹಿಂದಿನ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಪಕ್ಷದಿಂದ ಹೊರನಡೆದಿದ್ದು, ಜಿ.ಎಸ್.ಬಸವರಾಜ್ ಅವರು ಅಲ್ಲಿಂದ ಸ್ಪರ್ಧಿಸದಿರಬಹುದು ಎಂದು ಪರಿಗಣಿಸಿ ಆಕಾಂಕ್ಷಿಗಳ ಬೇಡಿಕೆ ಹೆಚ್ಚಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದ 28 ಕ್ಷೇತ್ರಗಳ ಪೈಕಿ ಗೆದ್ದಿದ್ದು ಕೇವಲ ಎರಡು ಕ್ಷೇತ್ರ.
ಕಳೆದ ನಾಲ್ಕು ಬಾರಿ ಕೆಲವು ಕಾಂಗ್ರೆಸ್ ನಾಯಕರು ಸೋತಿರುವುದರಿಂದ ಗೆಲ್ಲುವ ಅಭ್ಯರ್ಥಿಗಳ ಕೊರತೆ ಎದ್ದು ಕಾಣುತ್ತಿದೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಸೋತ ಹಲವರು ಲೋಕಸಭೆ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಈ ನಡುವೆ ಬಿಜೆಪಿ ಪಕ್ಷವು 14-15 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸುವ ಸೂಚನೆಯನ್ನು ನೀಡಿದ್ದು, ರಾಜ್ಯದಲ್ಲಿ ಆಡಳಿತ ಪಕ್ಷದ ಅಭ್ಯರ್ಥಿಗಳನ್ನು ನೋಡಿಕೊಂಡು ಅಳೆದು ತೂಗಿ ರಾಜಕೀಯ ಲೆಕ್ಕಾಚಾರ ಹಾಕಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.