ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕಾಮಗಾರಿಗಳ ಟೆಂಡರ್,ಮತ್ತಿತರ ವಿಷಯಗಳಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ್ದ ಆರೋಪದ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.ಈ ಸಮಿತಿಯು ಸ್ಥಳ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ, ವಿವರವಾದ ತನಿಖೆ ನಡೆಸಿ, ಲೋಪದೋಷಗಳ ಮಾಹಿತಿ ಹಾಗೂ ಅದಕ್ಕೆ ಕಾರಣರಾದ ಆರೋಪಿಗಳನ್ನು ಪತ್ತೆ ಮಾಡಿ ಸಂಪೂರ್ಣ ವರದಿಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ 30 ದಿನಗಳ ಒಳಗೆ ಸಲ್ಲಿಸಬೇಕು ಎಂದೂ ಆದೇಶದಲ್ಲಿ ವಿವರಿಸಲಾಗಿದೆ.
ತನಿಖಾ ಸಮಿತಿಗೆ ಸಂಬಂಧಪಟ್ಟಂತೆ ಅಗತ್ಯವಾದ ಕಡತಗಳು, ದಾಖಲಾತಿಗಳನ್ನು ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಒದಗಿಸಬೇಕು. ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಖುದ್ದು ಹಾಜರಿದ್ದು ತನಿಖಾ ಸಮಿತಿಗೆ ಸಂಪೂರ್ಣ ಸಹಕಾರ ನೀಡಬೇಕು. ಸಮಿತಿಗೆ ಅಗತ್ಯವಿದ್ದರೆ, ಅಧ್ಯಕ್ಷರ ಕೋರಿಕೆಯಂತೆ ಗುಣಮಟ್ಟ ಪರೀಕ್ಷೆಗೆ ನೋಂದಾಯಿತ 3ನೇ ಸ್ವತಂತ್ರ ಸಂಸ್ಥೆಯ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದೂ ಆದೇಶದಲ್ಲಿ ಲೋಕೋಪಯೋಗಿ ಇಲಾಖೆ ತಿಳಿಸಿದೆ.
ತನಿಖೆಗೆ ಸಂಬಂಧಿಸಿದಂತೆ ಸಹಾಯಕ್ಕೆ ಅಗತ್ಯವಿರುವ ತಾಂತ್ರಿಕ ಸಲಹೆಗಾರರು,ಆರ್ಥಿಕ ಸಲಹೆಗಾರರು ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ತೆಗೆದುಕೊಳ್ಳಬಹುದು.ರಾಜ್ಯದಲ್ಲಿ ಪ್ರಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಯಲ್ಲಿ ನಡೆಯುತ್ತಿರುವ ಪ್ಯಾಕೇಜ್ ಪದ್ಧತಿ, ಬಾಕಿ ಮೊತ್ತ ಬಿಡುಗಡೆ ಮತ್ತು ಟೆಂಡರ್ ಪ್ರಕ್ರಿಯೆ ಇತ್ಯಾದಿಗಳಲ್ಲಿ ಶೇ 40ಕ್ಕಿಂತಲೂ ಹೆಚ್ಚಿನ ಮೊತ್ತದ ಲಂಚ, ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಡಿ. ಕೆಂಪಣ್ಣ ಅವರು 2021ರ ಜುಲೈ 6ರಂದು ಪ್ರಧಾನಿ ನರೇಂದ್ರ ಮೋದಿಗೆ ಮತ್ತು 2021ರ ಆಗಸ್ಟ್ 30, 2022ರ ಮಾರ್ಚ್ 11 ಮತ್ತು ಏಪ್ರಿಲ್ 25ರಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದರು.ಈ ಗಂಭೀರ ಆರೋಪಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ತನಿಖೆ ನಡೆದಿಲ್ಲ. ಇದೀಗ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಆಡಳಿತದಲ್ಲಿ ಪಾರದರ್ಶಕತೆಯನ್ನು ಜಾರಿಗೊಳಿಸಬೇಕಿದೆ ಎಂಬ ಕಾರಣಕ್ಕೆ ತನಿಖಾ ಸಮಿತಿ ರಚಿಸಲಾಗಿದೆ ಎಂದೂ ಆದೇಶದ ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ