ಜಿ.ಪಂ, ತಾ.ಪಂ, ಗ್ರಾ.ಪಂ‌. ಅಧ್ಯಕ್ಷರ ಅವಧಿ ಐದು ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ ಇಂಗಿತ

ರಾಜ್ಯ

ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷರ ಅವಧಿಯನ್ನು ಐದು ವರ್ಷಗಳಿಗೆ ಹೆಚ್ಚಿಸಲು ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆಗೆ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ಪ್ರಮುಖ ವಿಷಯಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಯಿತು. ಕಾಂಗ್ರೆಸ್ ನೇತೃತ್ವದ ಸರ್ಕಾರವು ಹಿಂದಿನ ಅವಧಿಯಲ್ಲಿ ರೂಪಿಸಿದ್ದ ಕಾಯ್ದೆಯಂತೆ ಪಂಚಾಯಿತಿ ಅಧ್ಯಕ್ಷರಿಗೆ ಐದು ವರ್ಷಗಳ ಅಧಿಕಾರ ಅವಧಿ ನೀಡಲು ಕಾಯ್ದೆಗೆ ಪುನಃ ತಿದ್ದುಪಡಿ ತರುವ ವಿಷಯ ಸಭೆಯಲ್ಲಿ ಪ್ರಸ್ತಾಪವಾಯಿತು.

‘ಈ ವಿಷಯವನ್ನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಂಡಿಸಿ, ಶಾಸಕರ ಅಭಿಪ್ರಾಯ ಆಲಿಸಿದ ಬಳಿಕ ಮುಂದುವರಿಯೋಣ’ ಎಂದು ಮುಖ್ಯಮಂತ್ರಿ ಸೂಚಿಸಿದರು.