ಸರ್ಕಾರಿ ಶಾಲೆಯ 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೂ ಪೌಷ್ಟಿಕ ಆಹಾರ ಕೊಡುವ ಯೋಜನೆಯನ್ನು ವಿಸ್ತರಿಸಿದ್ದಕ್ಕಾಗಿ ಅಭಿನಂದಿಸಿದ ಹಾಗೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಕೋರಿಕೊಂಡಿದ್ದ ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶನಿವಾರ ಭೇಟಿಮಾಡಿದರು.
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಆಶಾ ಪಾಟೀಲ ಅವರನ್ನು ಸಿದ್ದರಾಮಯ್ಯ ಭೇಟಿಮಾಡಿ,ಕೆಲಹೊತ್ತು ಮಾತುಕತೆ ನಡೆಸಿದರು.ಆಶಾ ಅವರು ಮಳಲಿಯಲ್ಲಿರುವ ಶ್ರೀ ಜಗದ್ಗುರು ಫಕ್ಕಿರೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಾರೆ.ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದೂ ಸೇರಿದಂತೆ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ಧಾರವಾಡ ಜಿಲ್ಲೆ ಕುಂದಗೋಳದ ಆಶಾ ನೆಹರು ಪಾಟೀಲ ಎಂಬ ವಿದ್ಯಾರ್ಥಿನಿಯನ್ನು ಕೃಷಿ ಮೇಳ ಉದ್ಘಾಟನೆಗೆ ಧಾರವಾಡಕ್ಕೆ ತೆರಳಿದ್ದ ವೇಳೆಯಲ್ಲಿ ಭೇಟಿಯಾಗಿ ಮಾತನಾಡಿದ್ದು ನನಗೆ ಖುಷಿ ಕೊಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.
ನಮ್ಮ ಯೋಜನೆಗಳ ಫಲಾನುಭವಿಯಾದ ಪುಟ್ಟ ಹುಡುಗಿಯೊಬ್ಬಳು ನನ್ನೊಂದಿಗೆ ಪತ್ರದ ಮೂಲಕ ತನ್ನ ಸಂತಸ ಹಂಚಿಕೊಂಡು, ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದಳು. ಪತ್ರ ಓದಿದಾಗಿಂದ ಆ ಮಗುವನ್ನು ಒಮ್ಮೆ ಭೇಟಿಯಾಗಬೇಕೆಂದು ಬಯಸಿದ್ದೆ, ಅದು ಇಂದು ಸಾಧ್ಯವಾಯಿತು. ಇಂತಹ ಮುಗ್ಧ ಮನಸ್ಸಿನ ಮಕ್ಕಳ ಭವಿಷ್ಯದ ಕನಸುಗಳು ನಮ್ಮ ಸರ್ಕಾರದ ಕೈಗಳಲ್ಲಿ ಸುರಕ್ಷಿತವಾಗಿದೆ. ಈ ಮಕ್ಕಳ ಕನಸನ್ನು ನನಸು ಮಾಡುವುದು ನಮ್ಮ ಕರ್ತವ್ಯವೆಂದು ಭಾವಿಸಿ, ಆ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.