ಮಂಗಳೂರು: ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿರುತ್ತಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳ್ಯಾರು ಪರಿಸರದ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು, ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಮೇಲೆ ಬೆಟ್ಟಿಂಗ್ ಜೂಜಾಟ ಆಡುತ್ತಾ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿಕೊಂಡು ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿ ಹಳೆಯಂಗಡಿ ನಿವಾಸಿ ದೀಪಕ್ ಹಾಗೂ ಮರಕಡ ನಿವಾಸಿ ಸಂದೀಪ್ ಶೆಟ್ಟಿ ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ರೂ. 31,000/- ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಪಶಕ್ಕೆ ಪಡೆದಿರುವ ಸ್ವತ್ತಿನ ಆಂದಾಜು ಮೌಲ್ಯ ರೂ. 1,11,000 ಎಂದು ತಿಳಿದುಬಂದಿದೆ. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿರುತ್ತದೆ. ಈ ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಹಲವಾರು ಮಂದಿ ಭಾಗಿಯಾಗಿದ್ದು, ಪತ್ತೆ ಕಾರ್ಯಚರಣೆ ಮುಂದುವರಿದಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ ಬೆಟ್ಟಿಂಗ್ ದಂಧೆಕೋರರನ್ನು ಬಂಧಿಸಿರುತ್ತಾರೆ.