ಮಧ್ಯರಾತ್ರಿ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥನ ಅಟ್ಟಾಡಿಸಿಕೊಂಡು ಭೀಕರ ಹತ್ಯೆ– ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣು

ಕರಾವಳಿ

ಪುತ್ತೂರು ನೆಹರೂನಗರದ ಬಳಿ ಸೋಮವಾರ ಮಧ್ಯರಾತ್ರಿ ಕ್ಷುಲ್ಲಕ ವಿಷಯಕ್ಕೆ ದುಷ್ಕರ್ಮಿಗಳ ತಂಡವೊಂದು ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ ಎಂಬ ಯುವಕನನ್ನು ಅಟ್ಟಾಡಿಸಿಕೊಂಡು ಮಾರಕಾಸ್ತ್ರ ಗಳಿಂದ ಕೊಚ್ಚಿ ಕೊಲೆಗೈದ ಘಟನೆ ವರದಿಯಾಗಿದೆ. ಅವರನ್ನು ತಲವಾರಿನಿಂದ ಕೊಚ್ಚಿ ಕೊಲೆಗೈದ ಘಟನೆ ಸಂಭವಿಸಿದೆ. ಕಳೆದ 6 ವರ್ಷಗಳಿಂದ ಕಲ್ಲೇಗ ಟೈಗರ್ಸ್‌ ಎಂಬ ಹುಲಿ ವೇಷ ತಂಡವನ್ನು ಅವರು ಮುನ್ನಡೆಸುತ್ತಿದ್ದರು.

ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಅಕ್ಷಯ್‌ ನನ್ನು ನೆಹರೂ ನಗರಕ್ಕೆ ಬರಲು ಹೇಳಿ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೃತ್ಯವು ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ.

ನೆಹರೂ ನಗರದಿಂದ ವಿವೇಕಾನಂದ ಕಾಲೇಜಿಗೆ ತೆರಳುವ ರಸ್ತೆಯಲ್ಲಿ ಹೆದ್ದಾರಿಯ ತುಸು ದೂರದಲ್ಲಿರುವ ಕೆನಾರ ಬ್ಯಾಂಕಿನ ಎಟಿಎಂ ಬಳಿ ಅಕ್ಷಯ್‌ ಮೇಲೆ ತಂಡ ದಾಳಿ ನಡೆಸಿದ್ದು, ಅಲ್ಲಿಂದ ಆತನನ್ನು ಅಟ್ಟಾಡಿಸಿಕೊಂಡು ಬಂದು ತಲವಾರಿನಿಂದ ದಾಳಿ ನಡೆಸಿದ್ದಾರೆ. ಎಟಿಎಂ ಬಳಿಯಿಂದ ಮಾಣಿ ಮೈಸೂರು ಹೆದ್ದಾರಿಯನ್ನು ದಾಟಿ ಆಚೆ ಜನವಿರಳವಾಗಿರುವ ಪ್ರದೇಶದವರೆಗೂ ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಮಾಣಿ ಮೈಸೂರು ಹೆದ್ದಾರಿಯ ಒಂದು ಬದಿಯಿಂದ ಇನ್ನೊಂದು ಬದಿಯವರೆಗೆ ರಕ್ತದ ಕಲೆಗಳಿವೆ. ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಪಡೀಲಿನ ಮನೀಶ್‌ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ತಿಳಿದುಬಂದಿದೆ.