ಮಧ್ಯ ಪ್ರದೇಶ ಚುನಾವಣೆ: ಕಾಂಗ್ರೆಸ್ ಪಕ್ಷ 120-130 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರಕ್ಕೆ

ರಾಷ್ಟ್ರೀಯ

ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. 2024ರ ಲೋಕಸಭಾ ಚುನಾವಣೆಗೂ ಮುನ್ನ ನಡೆಯುತ್ತಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶ ಸಹ ಒಂದು. ಕಾಂಗ್ರೆಸ್ ಮತ್ತು ಬಿಜೆಪಿ ಎದುರಾಳಿಗಳು. ನವೆಂಬರ್ 17ರಂದು ಚುನಾವಣೆ ನಡೆಯುತ್ತಿದೆ. ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ರಾಜ್ಯದಲ್ಲಿ ಹಾಲಿ ಬಿಜೆಪಿ ಸರ್ಕಾರವಿದೆ.

ರಾಜ್ಯದಲ್ಲಿ ವಿವಿಧ ಸಂಸ್ಥೆಗಳು ಚುನಾವಣಾ ಸಮೀಕ್ಷೆಯನ್ನು ನಡೆಸುತ್ತಿವೆ. ನಡೆಸಿದ ಚುನಾವಣಾ ಸಮೀಕ್ಷೆ ಫಲಿತಾಂಶ ಪ್ರಕಟವಾಗಿದೆ. ರಾಜ್ಯದ ಪ್ರತಿಪಕ್ಷವಾದ ಕಾಂಗ್ರೆಸ್ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ. ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಪಕ್ಷ 120-130 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. 2018ರ ಚುನಾವಣೆಯಲ್ಲಿ ಪಕ್ಷ 114 ಸ್ಥಾನಗಳಲ್ಲಿ ಜಯಗಳಿಸಿತ್ತು.

ಮಧ್ಯಪ್ರದೇಶ ರಾಜ್ಯದ ಆಡಳಿತ ಪಕ್ಷ ಬಿಜೆಪಿ ಚುನಾವಣೆಯಲ್ಲಿ 95-105 ಸ್ಥಾನಗಳಲ್ಲಿ ಜಯಗಳಿಸಲಿದೆ. ಇತರರು 3-7 ಸ್ಥಾನಗಳಲ್ಲಿ ಜಯಗಳಿಸಬಹುದು ಎಂದು ಸಮೀಕ್ಷೆ ಅಂದಾಜಿಸಿದೆ. ನವೆಂಬರ್‌ 17ರಂದು ಮತದಾನ ನಡೆಯಲಿದೆ. ಆದರೆ ಚುನಾವಣಾ ಫಲಿತಾಂಶ ಪ್ರಕಟವಾಗಲು ಡಿಸೆಂಬರ್ 3ರ ತನಕ ಕಾಯಬೇಕಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಶೇ 42.11, ಬಿಜೆಪಿ ಶೇ 40.3, ಇತರರು ಶೇ 17.59ರಷ್ಟು ಮತಗಳಿಕೆ ಮಾಡಲಿದ್ದಾರೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಶೇ 40.89, ಬಿಜೆಪಿ ಶೇ 41.02, ಇತರರು ಶೇ 18.09ರಷ್ಟು ಮತಗಳನ್ನು ಪಡೆದಿದ್ದರು. ಪ್ರತಿಪಕ್ಷ ಕಾಂಗ್ರೆಸ್ ಪ್ರಕಾರ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಅಲ್ಲದೇ ಕರ್ನಾಟಕದ ಮಾದರಿಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ಹಲವಾರು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಆದ್ದರಿಂದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರವನ್ನು ಪಡೆಯಲಿದೆ.

ಈ ಬಾರಿ ಬಿಜೆಪಿ 95-105 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಪ್ರಧಾನಿ ನರೇಂದ್ರ ಮೋದಿಯನ್ನು ಕರೆತಂದು ಬಿಜೆಪಿ ಬಿರುಸಿನ ಪ್ರಚಾರವನ್ನು ಮಾಡುತ್ತಿದೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಪಕ್ಷ ಚುನಾವಣೆ ಎದುರಿಸುತ್ತಿದೆ. ಕಾಂಗ್ರೆಸ್ ಪಕ್ಷ ಬಂಡಾಯದ ಬಿಸಿಯನ್ನು ಎದುರಿಸುತ್ತಿದೆ. ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಚುನಾವಣೆಗೆ ಸ್ಪರ್ಧೆ ಮಾಡಿದ ಕಾರಣಕ್ಕೆ 39 ನಾಯಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ. ಈ ಬಾರಿ ಟಿಕೆಟ್ ಸಿಗದ ನಾಯಕರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ.