ಮಕ್ಕಳಿಗೆ ಪೌಷ್ಟಿಕ ಆಹಾರ ನೆಪದಲ್ಲಿ 600 ಕೋಟಿ ರೂ. ಭ್ರಷ್ಟಾಚಾರ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು.!

ರಾಜ್ಯ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 600 ಕೋಟಿ ರೂಪಾಯಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಕೀಲ ನಟರಾಜ್ ಶರ್ಮಾ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕೋಟಿಗಟ್ಟಲೆ ಭ್ರಷ್ಟಾಚಾರ ನಡೆದಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಅಕ್ರಮಗಳು ನಡೆಯುತ್ತಿವೆ. ಅನರ್ಹ ಸಹಕಾರಿ ಸಂಘಗಳಿಂದ ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಪೂರೈಕೆಗೆ ಟೆಂಡರ್‌ ಕರೆಯಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಆ ಇಲಾಖೆಯ ಅಧಿಕಾರಿಗಳು ಕಪ್ಪು ಪಟ್ಟಿಗೆ ಸೇರಿರುವ ಕ್ರಿಸ್ಟಿ ಫ್ರೈಡ್ ಗ್ರಾಂ ಕಂಪನಿಯೊಂದಿಗೆ ಈ ಟೆಂಡರ್ ನೀಡಿದ್ದಾರೆ ಎಂದು ವಕೀಲರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಅಂಗನವಾಡಿಗಳಿಗೆ ಗುತ್ತಿಗೆದಾರರು ಪೂರೈಸುತ್ತಿರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ. ಇದರೊಂದಿಗೆ ಸ್ಥಳೀಯ ಸೇವಾ ಸಂಸ್ಥೆಗಳ ಮೂಲಕವೇ ಆಹಾರ ಪೂರೈಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಆದರೆ ಸಚಿವರು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ. ಕಪ್ಪು ಪಟ್ಟಿಯಲ್ಲಿರುವ ಕಂಪನಿಗೆ ಆಹಾರ ಪೂರೈಸಲು ಟೆಂಡರ್ ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದರಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜೆ.ಸಿ.ಪ್ರಕಾಶ್ ಹಾಗೂ ನಿರ್ದೇಶಕರು ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಅಕ್ರಮವಾಗಿ ಟೆಂಡರ್ ನೀಡಿ ಕಂಪನಿಗಳಿಂದ ಶೇ.10ರಷ್ಟು ಕಮಿಷನ್ ಪಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.