ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ರೂಪಾಂತರಿ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕೆಲವೊಂದು ನಿರ್ಬಂಧ ಹೇರಲಾಗುತ್ತಿದೆ ಅನ್ನುವ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿ ಇಂದು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ (ಮಂಗಳವಾರ) ನಡೆಯಲಿರುವ ತಾಂತ್ರಿಕ ಸಲಹಾ ಸಮಿತಿ ಸಭೆ ಭಾರೀ ಮಹತ್ವ ಪಡೆದಿದ್ದು, ಕ್ರಿಸ್ ಮಸ್, ಹೊಸ ವರ್ಷ ಸಂಭ್ರಮಾಚರಣೆಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕೇರಳದಲ್ಲಿ ಪತ್ತೆಯಾಗಿರುವ JN.1 ಕೋವಿಡ್ ಹೊಸ ಉಪತಳಿಯೂ ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಅದರಲ್ಲೂ ಕೇರಳದ ಗಡಿ ಪ್ರದೇಶವಾಗಿರುವ ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ ಕೇಂದ್ರಿತವಾಗಿ ಹೆಚ್ಚು ಕಟ್ಟುನಿಟ್ಟಿನ ಕ್ರಮ ಜಾರಿಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇರಳದ ಗಡಿ ಭಾಗವಾಗಿರುವ ತಲಪಾಡಿ, ಸುಳ್ಯ, ಬಂಟ್ವಾಳ ಗಳಲ್ಲಿ ಹೆಚ್ಚಿನ ತಪಾಸಣೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಕೇರಳದ ಹೆಚ್ಚಿನ ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಗೆ ದಿನನಿತ್ಯ ಸಂಚರಿಸುವುದರಿಂದ, ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಸಾಕಷ್ಟು ಮುಂಜಾಗ್ರತೆ ಕ್ರಮ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ತಿಳಿದು ಬಂದಿದೆ.