ಭ್ರೂಣ ಹತ್ಯೆ ಕಾಯ್ದೆ ತಿದ್ದುಪಡಿ ಮಾಡಲು ಸರ್ಕಾರ ಚರ್ಚಿಸಿದ್ದು, ಈ ಮೂಲಕ ಭ್ರೂಣ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳಿಗೆ 5 ಲಕ್ಷದವರೆಗೆ ದಂಡ ವಿಧಿಸಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಭ್ರೂಣ ಹತ್ಯೆ ತಡೆಗೆ ರಾಜ್ಯ ಮಟ್ಟದಲ್ಲಿ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರಚಿಸಲಾಗುವುದು. ಈ ಕಾರ್ಯಪಡೆಗಳು ಭ್ರೂಣ ಹತ್ಯೆ ಪ್ರಕರಣಗಳ ವಿಚಾರದಲ್ಲಿ ಪಿಸಿಪಿಎನ್ಡಿಟಿ ಕಾಯ್ದೆ ಅಡಿ ಕಾರ್ಯ ನಿರ್ವಹಿಸಿ ಹೆಚ್ಚು ನಿಗಾ ವಹಿಸಲಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.
ಭ್ರೂಣ ಹತ್ಯೆಗೆ ಈಗಿರುವ ಕಾಯ್ದೆಯಲ್ಲಿ ರೂ.10 ಸಾವಿರ ದಂಡ, 3 ವರ್ಷ ಜೈಲು ಶಿಕ್ಷೆ ಇದೆ. ಇದನ್ನು ರೂಪಾಯಿ ಐದು ಲಕ್ಷದವರೆಗೆ ದಂಡ ವಿಧಿಸಿ, ಐದುವರ್ಷ ಜೈಲು ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದು, ಜಾಮೀನುರಹಿತ ಅಪರಾಧ ಎಂದು ಪರಿಗಣಿಸಲಾಗುವುದು ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.