ಜುಲೈನಿಂದ ಎಲ್‌ಇಡಿ ಬಲ್ಪ್ ಅಳವಡಿಸಿರುವ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ
ರಾಜ್ಯದಲ್ಲಿ ವಾಹನಗಳಿಗೆ ಇನ್ನು ಮುಂದೆ ಎಲ್‌ಇಡಿ ದೀಪ ಅಳವಡಿಸುವುದನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಸಿದವರ ವಿರುದ್ದ ಜುಲೈಯಿಂದ ಕೇಸ್ ದಾಖಲಿಸುವುದಾಗಿ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ಬಲ್ಪ್‌ಗಳನ್ನು ಅಳವಡಿಸಿರುವುದು ಕಂಡುಬಂದಿದೆ. ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರ ವಾಹನ ಸವಾರರಿಗೆ, ಚಾಲಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಅಲ್ಲದೆ, ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡುಬಂದಿದೆ.
ಈ ಪೈಕಿ ಪ್ರಮುಖವಾಗಿ ಭಾರಿ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿದ್ದಾರೆ. ಇದರಿಂದ ಇತರೆ ಚಾಲಕರಿಗೆ ವಾಹನ ಚಲಾಯಿಸಲು ತೊಂದರೆ ಉಂಟಾಗುತ್ತಿದೆ. ಆದರಿಂದ ವಾಹನ ಮಾಲೀಕರು ಕಡ್ಡಾಯವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆಯಂತೆ ಮಾರ್ಗಸೂಚಿ ಪಾಲನೆ ಮಾಡಬೇಕು.

ಇಲ್ಲವಾದರೆ ಸವಾರ, ಚಾಲಕರ ವಿರುದ್ಧ ಇಂಡಿಯನ್ ಮೋಟಾರು ಕಾಯ್ದೆಯ ಕಲಂ 177ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂ ಮತ್ತು ಸು) ಅಲೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಜುಲೈನಿಂದ ಎಲ್‌ಇಡಿ ಬಲ್ಪ್ ಅಳವಡಿಸಿರುವ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಜುಲೈ 31ಕ್ಕೆ ವರದಿ ಒಪ್ಪಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಘಟಕಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾವಹಿಸಬೇಕು. ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವುದು ಕಂಡುಬಂದರೆ ಜುಲೈನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆದೇಶದಲ್ಲಿ ಸೂಚಿಸಿದ್ದಾರೆ.