ರಾಜ್ಯ ಸರ್ಕಾರವು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಸರ್ಕಾರವು ವಿಶೇಷ ರಾಜ್ಯ ಪತ್ರದ ಮೂಲಕ ಅಧಿಸೂಚನೆ ಹೊರಡಿಸಿದೆ. ಇನ್ನೂ 2027ರ ಜನವರಿ ತಿಂಗಳಲ್ಲಿ ಚುನಾವಣೆ ನಡೆಯಲಿವೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಎರಡು ತಿಂಗಳ ಹಿಂದೆ ಅಂತಿಮ ಅಧಿಸೂಚನೆ ಹೊರಡಿಸಿದ್ದ ಸರ್ಕಾರವು, ಆಕ್ಷೇಪಣೆಗೆ ಅವಕಾಶ ನೀಡಿತ್ತು. 2000 ಕ್ಕೂ ಅಧಿಕ ಆಕ್ಷೇಪಣೆಗಳು ಬಂದಿದ್ದವು. ಇವುಗಳನ್ನೆಲ್ಲಾ ಅವಲೋಕನ ಮಾಡಿ ಸದ್ಯ ಅಂತಿಮ ಮೀಸಲಾತಿ ಹೊರಡಿಸಿದೆ. ಈ ಮೂಲಕ ಚಂಚಾಯಿತಿ ಚುನಾವಣೆ ಹಾದಿ ಸರಾಗವಾಗಿದೆ.
ಸರ್ಕಾರ ಹೊರಡಿಸಿರುವ ಅಂತಿಮ ಅಧಿಸೂಚನೆಯ ಪ್ರಕಾರ, ರಾಜ್ಯದ ಒಟ್ಟು 30 ಜಿಲ್ಲೆಗಳ ವ್ಯಾಪ್ತಿಯಲ್ಲಿರುವ 1,101 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಹಾಗೂ 234 ತಾಲೂಕು ಪಂಚಾಯಿತಿಗಳ 3,580 ಸದಸ್ಯ ಸ್ಥಾನಗಳಿಗೆ ಮೀಸಲಾತಿಯನ್ನು ಅಂತಿಮಗೊಳಿಸಲಾಗಿದೆ. ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕವೇ ಈ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಸ್ಥಳೀಯ ಸಂಸ್ಥೆಗಳ ಅಧಿಕಾರಾವಧಿಯು 2022ರಲ್ಲೇ ಮುಕ್ತಾಯಗೊಂಡಿದ್ದರೂ, ಹಲವು ಕಾರಣಗಳಿಂದ ಚುನಾವಣೆ ನಡೆದಿರಲಿಲ್ಲ. ಹಲವು ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಿದ್ದು ಮಾತ್ರವಲ್ಲದೆ, ಕೆಲ ಗ್ರಾಮೀಣ ಪ್ರದೇಶಗಳು ಸಮೀಪದ ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಗೆ ಸೇರ್ಪಡೆಗೊಂಡಿದ್ದವು. ಇದರಿಂದಾಗಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಭೌಗೋಳಿಕ ಗಡಿಗಳನ್ನು ಮರುವಿಂಗಡಣೆ ಮಾಡುವುದು ಅನಿವಾರ್ಯವಾಗಿತ್ತು. ಹಿಂದಿನ ಸರ್ಕಾರದ ಅವಧಿಯಲ್ಲೇ ಚುನಾವಣೆ ನಡೆಯಬೇಕಿತ್ತಾದರೂ, ಪ್ರಕ್ರಿಯೆಗಳು ಪೂರ್ಣಗೊಳ್ಳದ ಕಾರಣ ವಿಳಂಬವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸುವ ಸರ್ಕಾರದ ಪಾಲಿನ ಪ್ರಮುಖ ಕರ್ತವ್ಯ ಪೂರ್ಣಗೊಂಡಿದೆ. ಇನ್ನು ಚುನಾವಣಾ ದಿನಾಂಕ, ನೀತಿ ಸಂಹಿತೆ ಹಾಗೂ ವೇಳಾಪಟ್ಟಿಯನ್ನು ನಿಗದಿಪಡಿಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗ ಮೇಲಿದೆ. ಆಯೋಗವು ದಿನಾಂಕ ಪ್ರಕಟಿಸಿದ ತಕ್ಷಣವೇ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಲಿವೆ. ಎಂದು ಸಚಿವರು ತಿಳಿಸಿದ್ದಾರೆ.
