ವಕೀಲರ ಮೇಲೆ ಹಲ್ಲೆ ಪ್ರಕರಣ, 3 ಲಕ್ಷ ದಂಡ ಕಟ್ಟಲು ಪೊಲೀಸರಿಗೆ ಹೈಕೋರ್ಟ್ ಕಟ್ಟಪ್ಪಣೆ

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರಿಂದ ನಡುರಾತ್ರಿ ಹಲ್ಲೆಗೊಳಗಾಗಿದ್ದ ಯುವ ವಕೀಲ ಕುಲದೀಪ್ ಶೆಟ್ಟಿ ಅವರಿಗೆ 3 ಲಕ್ಷ ಪರಿಹಾರ ನೀಡುವಂತೆ ಹಾಗೂ ಈ ಹಣವನ್ನು ತಪ್ಪಿತಸ್ಥ ಪೊಲೀಸರಿಂದ ವಸೂಲಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಇದೇ ವೇಳೆ, ವಕೀಲ ಕುಲದೀಪ್ ಮೇಲೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ತನಿಖೆ ನಡೆಸಿ ಗರಿಷ್ಟ ಒಂದು ತಿಂಗಳಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ತಮ್ಮ ಮೇಲೆ ಹಲ್ಲೆ ಮಾಡಿದ ಬಂಟ್ವಾಳದ ಪೂಂಜಾಲಕಟ್ಟೆ ಪೊಲೀಸರ ವಿರುದ್ಧ ತನಿಖೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ಪೊಲೀಸರ ಹಲ್ಲೆಯಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ನೊಂದಿರುವ ತಮಗೆ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿ ಯುವ ವಕೀಲರಾದ ಕುಲದೀಪ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಇಂದು ಪ್ರಕಟಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿದಾರರಾದ ಯುವ ವಕೀಲ ಕುಲದೀಪ್ ಶೆಟ್ಟಿ ಅವರಿಗೆ ಮೂರು ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ. ಜೊತೆಗೆ ಆರೋಪಿ ಪೊಲೀಸರ ವಿರುದ್ಧ ತನಿಖೆಗೆ ಆದೇಶಿಸಿದೆ.

ಪೊಲೀಸರು ಸಿವಿಲ್‌ ದಾವೆಗಳಲ್ಲಿ ಮಧ್ಯಪ್ರವೇಶ ಮಾಡುತ್ತಿದ್ದಾರೆ. ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರ ಮಧ್ಯಪ್ರವೇಶಿಸಬಾರದು ಎಂಬ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ನಿರ್ದೇಶನ ಕೇವಲ ಕಾಗದಕ್ಕೆ ಸೀಮಿತವಾಗಿದೆ. ಮುಂದೆ ಇಂತಹುದೇ ನಡವಳಿಕೆ ಮುಂದುವರೆದರೆ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ಮಾಡಬೇಕಾಗುತ್ತದೆ ಎಂದು ನ್ಯಾಯಾಲಯ ಪೊಲೀಸರಿಗೆ ಮೌಖಿಕವಾಗಿ ಎಚ್ಚರಿಕೆ ನೀಡಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಸ್ಥಳೀಯ ವ್ಯಕ್ತಿಯೊಬ್ಬರು ವಕೀಲ ಕುಲದೀಪ್ ವಿರುದ್ಧ ತಮ್ಮ ಮನೆಯ ಗೇಟ್ ಕದ್ದಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಈ ಮೇರೆಗೆ ಪಿಎಸ್ಐ ಸುತೇಶ್ ಕೆ.ಪಿ ಹಾಗೂ ಸಿಬ್ಬಂದಿ ಕುಲದೀಪ್ ಬಂಧಿಸಿ, ಅಮಾನವೀಯವಾಗಿ ಹಲ್ಲೆ ನಡೆಸಿದ್ದರು.