ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (79) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ 4.25ರ ಸುಮಾರಿಗೆ ನಿಧನರಾದರು ಎಂದು ತಿಳಿದು ಬಂದಿದೆ.ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ.
ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ ಕೊಟ್ಟಾಯಂನ ಸಿಎಮ್ಎಸ್ ಕಾಲೇಜು ಮತ್ತು ಚಂಗನಾಸ್ಸೆರಿಯ ಸೇಂಟ್ ಬರ್ಚ್ಮನ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನಿಂದ ಎಲ್‌ಎಲ್‌ಬಿ ಪದವಿ ಪೂರೈಸಿದ್ದರು.
ಕೇರಳ ವಿದ್ಯಾರ್ಥಿ ಒಕ್ಕೂಟದ ಮೂಲಕ ತಮ್ಮ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ 1967 ರಲ್ಲಿ ಕೇರಳ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷದ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಅವರು 1969 ರಲ್ಲಿ ಯುವ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷರಾಗಿದ್ದರು. 2004 ರಿಂದ 2006 ಹಾಗೂ 2011 ರಿಂದ 2016ರ ವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು.
ಸಾರ್ವಜನಿಕ ಸೇವೆಯಲ್ಲಿನ ಭ್ರಷ್ಟಾಚಾರವನ್ನು ತಡೆಗಟ್ಟಲು ಶ್ರಮಿಸಿದ್ದ ಇವರಿಗೆ 2013 ರಲ್ಲಿ ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು