ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ಗಳಿಂದ ಕೋಟ್ಯಾಂತರ ರೂಪಾಯಿ ಸಾಲ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸರಿ ಸುಮಾರು ಹತ್ತು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಕೃಷ್ಣಕುಮಾರ್ ಎಂಬಾತನೇ ಬಂದಿತ ಆರೋಪಿ. ಈತ ಬ್ಯಾಂಕ್‌ಗಳಿಗೆ ಸುಮಾರು 20 ಕೋಟಿ ರೂ ವಂಚಿಸಿರುವ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ.
ಬೇರೆಯವರ ಜಾಗ, ಬಿಡಿಎ ನಿವೇಶನಗಳನ್ನು ಖರೀದಿಸುವ ನೆಪದಲ್ಲಿ ಅಲ್ಪ ಪ್ರಮಾಣದ ಎಡ್ವನ್ಸ್ ಹಣ ನೀಡಿ ದಾಖಲೆಗಳ ಜೆರಾಕ್ಸ್ ಪ್ರತಿ ಪಡೆದುಕೊಳ್ಳುತ್ತಿದ್ದ. ನಂತರ ಇವರ ಗ್ಯಾಂಗ್ ಅದಕ್ಕೆ ತಾವೇ ಮಾಲೀಕರು ಎಂಬಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು. ಬಳಿಕ ಆರೋಪಿಗಳಲ್ಲಿ ಒಬ್ಬರು ಪ್ರತಿಷ್ಠಿತ ಕಂಪನಿಯ ಉದ್ಯೋಗಿ ಎಂಬಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದ. ಬಳಿಕ ಈ ಜಾಗ, ನಿವೇಶನಗಳನ್ನು ಖರೀದಿಸುವುದಾಗಿ ಬ್ಯಾಂಕ್‌ನಿಂದ ಸಾಲ ಪಡೆದುಕೊಳ್ಳುತ್ತಿದ್ದರು.

ಪ್ರಕರಣದಲ್ಲಿ ಕೆಲ ಆರೋಪಿಗಳನ್ನು ಬಂಧಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ಆದರೆ, ಕೃಷ್ಣಕುಮಾರ್ ಮಾತ್ರ 2013ರಿಂದಲೂ ತಲೆ ಮರೆಸಿಕೊಂಡಿದ್ದ. ಇದೀಗ ಕೃಷ್ಣಕುಮಾರ್ನನ್ನು ಶೇಷಾದ್ರಿಪುರಂ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಸ್ಕ್ಯಾನರ್, ಕೆಲ ನಕಲಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.