ಗ್ರಾ.ಪಂ ಗಳಲ್ಲಿ ತೆರಿಗೆ ವಸೂಲಿಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಸರ್ಕಾರ; ಪ್ರಗತಿ ಸಾಧಿಸದೇ ಇರುವ ಗ್ರಾಮ ಪಂಚಾಯಿತ್ ಪಿಡಿಒಗಳ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ

ರಾಜ್ಯ

ತೆರಿಗೆ ವಸೂಲಿಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಸರ್ಕಾರ ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸದೇ ಇರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಪ್ರತಿ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಅತ್ಯಂತ ಕಡಿಮೆ ತೆರಿಗೆ ವಸೂಲು ಮಾಡಿರುವ ತಲಾ 10 ಮಂದಿ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸಿಇಒಗಳ ಸಭೆಯಲ್ಲಿ ಗ್ರಾಮ ಪಂಚಾಯಿತಿಗಳ ತೆರಿಗೆ ವಸೂಲಾತಿಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದೇ ಇರುವ ಚರ್ಚೆಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಗತಿ ಕುಂಠಿತಗೊಂಡಿರುವ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ತಕ್ಷಣ ನೋಟಿಸ್ ನೀಡುವಂತೆ ಹಾಗೂ ಲಘು ದಂಡನೆ ವಿಧಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದೆ.