ಸಂಡೂರಿನ 550 ಎಕ್ರೆ ಗಣಿ ಭೂಮಿ ಪ್ರಕರಣ; ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಅಭಿಯೋಜನಾ (ಪ್ರಾಸಿಕ್ಯೂಷನ್‌) ಮಂಜೂರಾತಿ ಕೋರಿ ಲೋಕಾಯುಕ್ತ 2023ರಲ್ಲಿ ರಾಜ್ಯಪಾಲರಿಗೆ ಪತ್ರ

ರಾಜ್ಯ

ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 550 ಎಕರೆ ಗಣಿ ಭೂಮಿಯನ್ನು ಕಾನೂನುಬಾಹಿರವಾಗಿ ವಿನೋದ್‌ ಗೋಯಲ್‌ ಎಂಬವರಿಗೆ ಮಂಜೂರು ಮಾಡಲು ಸಹಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರದ ಬೃಹತ್‌ ಉದ್ದಿಮೆ ಮತ್ತು ಉಕ್ಕು ಕೈಗಾರಿಕೆ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಅಭಿಯೋಜನಾ (ಪ್ರಾಸಿಕ್ಯೂಷನ್‌) ಮಂಜೂರಾತಿ ಕೋರಿ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2023ರ ಸೆಪ್ಟೆಂಬರ್‌ನಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಪತ್ರ ಬರೆದಿದ್ದಾರೆ.

2006ರಲ್ಲಿ ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರವಿದ್ದಾಗ ಮುಖ್ಯಮಂತ್ರಿಯಾಗಿದ್ದ ಎಚ್‌ ಡಿ ಕುಮಾರಸ್ವಾಮಿ ಅವರು ಎಂಸಿಆರ್‌ ನಿಯಮಾವಳಿಗಳನ್ನು ಉಲ್ಲಂಘಿಸಿ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಜೊತೆಗೂಡಿ ವಿನೋದ್‌ ಗೋಯಲ್‌ ಎಂಬ ವ್ಯಕ್ತಿಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಎನ್‌ಇಬಿ ರೇಂಜ್‌ನಲ್ಲಿನ 550 ಎಕರೆ ಭೂಮಿ ಮಂಜೂರು ಮಾಡಲು ಒಳಸಂಚು ರೂಪಿಸಿದ್ದಾರೆ ಎಂಬುದು ಆರೋಪವಾಗಿದೆ.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ ಮಾಲೀಕ ವಿನೋದ್‌ ಗೋಯಲ್‌ ಎಂದು ಸುಳ್ಳು ದಾಖಲೆಗಳನ್ನು ಸೃಷ್ಟಿಸಲು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಕೆ ಜಯಚಂದ್ರ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಬಿ ಟಿ ಜವರೇಗೌಡ ಸಹಕರಿಸಿದ ಆರೋಪಕ್ಕೆ ಗುರಿಯಾಗಿದ್ದಾರೆ.

ಈ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ವಿನೋದ್‌ ಗೋಯಲ್‌ ಅವರನ್ನು ಪ್ರಥಮ ಆರೋಪಿಯೆಂದೂ, ಎಚ್‌ ಡಿ ಕುಮಾರಸ್ವಾಮಿ ಅವರನ್ನು ಎರಡನೇ ಆರೋಪಿಯೆಂದೂ, ಕೆ ಜಯಚಂದ್ರ ಹಾಗೂ ಜವರೇಗೌಡ ಅವರನ್ನು ಕ್ರಮವಾಗಿ ಮೂರು ಮತ್ತು ನಾಲ್ಕನೇ ಆರೋಪಿಗಳನ್ನಾಗಿ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳಾದ 420, 465, 468, 409 ಜೊತೆಗೆ 120ಬಿ ಮತ್ತು ಐಪಿಸಿ ಸೆಕ್ಷನ್‌ 511, ಭ್ರಷ್ಟಾಚಾರ ನಿರೋಧಕ ಕಾಯಿದೆ ಸೆಕ್ಷನ್‌ 13(2) ಜೊತೆಗೆ 13(1)(ಡಿ) ಮತ್ತು ಎಂಎಂಆರ್‌ಡಿ ಕಾಯಿದೆಯ ಸೆಕ್ಷನ್‌ಗಳಾದ 21(2) ಮತ್ತು 23 ಅಡಿ ದಾಖಲಾಗಿರುವ ಪ್ರಕರಣದಲ್ಲಿ ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿಸಲು ಅಭಿಯೋಜನಾ ಮಂಜೂರಾತಿ ನೀಡುವಂತೆ ರಾಜ್ಯಪಾಲರಿಗೆ ಲೋಕಾಯುಕ್ತ ಪೊಲೀಸರು 2023ರ ಸೆಪ್ಟೆಂಬರ್‌ನಲ್ಲಿ ಮನವಿ ಮಾಡಿದ್ದಾರೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಸರ್ಕಾರವು 2014ರ ಜನವರಿ 24ರಂದು ವಿಶೇಷ ತನಿಖಾ ದಳವನ್ನು (ಎಸ್‌ಐಟಿ) ರಚಿಸಿ, ಎಲ್ಲಾ ಗಣಿಗಾರಿಕೆ ಪ್ರಕರಣಗಳನ್ನು ಎಸ್‌ಐಟಿಗೆ ವರ್ಗಾಯಿಸಿತ್ತು. ಈ ಪ್ರಕರಣವನ್ನೂ ಎಸ್‌ಐಟಿ ತನಿಖೆ ನಡೆಸಿ, ಆರೋಪ ಪಟ್ಟಿ ಸಿದ್ಧಪಡಿಸಿದ್ದು, ಅಭಿಯೋಜನಾ ಮಂಜೂರಾತಿಗೆ ಕೋರಿದೆ.