ಲಂಚ ಸ್ವೀಕರಿಸುತ್ತಿರುವಾಗ ಸಿಕ್ಕಿ ಬಿದ್ದಿದ್ದ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಪದ್ಮಾವತಿ ಎಂಬವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು ವರ್ಷದ ಹಿಂದೆ ಅವರ ಮೊಮ್ಮಗ ಮೂಲ್ಕಿ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು, ಅದನ್ನು ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗೆ ಕಳುಹಿಸಲಾಗಿತ್ತು.ಒಂದು ವರ್ಷ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ವಿಚಾರಿಸಿದಾಗ ದಿನೇಶ್ 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇರಿಸಿದ್ದರು.
ಡಿ. 19ರಂದು ಅರ್ಜಿದಾರರಿಂದ ದಿನೇಶ್ 4 ಲಕ್ಷ ರೂ. ಲಂಚದ ಹಣವನ್ನು ಸುರತ್ಕಲ್ ಬಳಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ವಜಾಗೊಳಿಸಿರುತ್ತಾರೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ವಾದಿಸಿದ್ದರು.