ವಿಟ್ಲ ಬೋಳಂತೂರಿನ ನಾರ್ಶ ಸಿಂಗಾರಿ ಬೀಡಿ ಮಾಲಕರ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.
ಜನವರಿ 3ರಂದು ರಾತ್ರಿ ದರೋಡೆ ಪ್ರಕರಣ ನಡೆದಿತ್ತು. 06 ಜನ ಅಪರಿಚಿತರು ಇ ಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 02/2025 ರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರ ಅದೇಶದ ಮೇರೆಗೆ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಿ, ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಿ ದಿನಾಂಕ 23-01-2025 ರಂದು ಪ್ರಕರಣಕ್ಕೆ ಸಂಬಂದಿಸಿದಂತೆ ಕೊಲ್ಲಂ ಜಿಲ್ಲೆಯ ಆರೋಪಿ ಅನಿಲ್ ಫರ್ನಾಂಡಿಸ್ ಪ್ರಾಯ 49 ವರ್ಷ, ಎಂಬಾತನನ್ನು ಬಂಧಿಸಿ, ಕೃತ್ಯಕ್ಕೆ ಉಪಯೋಗಿಸಿದ KL-02-BP-1104ನೇ ನೊಂದಣಿ ನಂಬ್ರದ ಎರ್ಟಿಗಾ ಕಾರು, 5,00,000/-ರೂ ನಗದು ಹಾಗೂ ನಕಲಿ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ TN-20-DB-5517ನೇ ನಂಬರ ಪ್ಲೇಟ್ನ್ನು ವಶಪಡಿಸಿಕೊಂಡಿದ್ದು, ಸ್ವಾದೀನಪಡಿಸಿಕೊಂಡ ನಗದು ಹಾಗೂ ವಾಹನದ ಒಟ್ಟು ಮೌಲ್ಯ- 11,00,000/- ರೂ ಆಗಬಹುದೆಂದು ಅಂದಾಜಿಸಲಾಗಿದೆ. ಸದ್ರಿ ಪ್ರಕರಣದಲ್ಲಿ ಉಳಿದ ಆರೋಪಿಗಳ ದಸ್ತಗಿರಿಗೆ ಬಾಕಿ ಇರುತ್ತದೆ.
ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಿಂದ, ಅಪರಾಧ ಪ್ರಕರಣಗಳಲ್ಲಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸಿರುತ್ತದೆ.
