ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆ; ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ

ರಾಜ್ಯ

ಏಷ್ಯಾದ ಹಲವು ದೇಶಗಗಳಲ್ಲಿ ಕೊರೋನಾದ ಹೊಸ ಅಲೆ ಹರಡುತ್ತಿದೆ. ಕಳೆದ ಕೆಲವು ವಾರಗಳಲ್ಲಿ ಸಿಂಗಾಪುರ ಮತ್ತು ಹಾಂಕಾಂಗ್‌ನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಈ ಮಧ್ಯೆ ಆರೋಗ್ಯ ಇಲಾಖೆಯು ಮೇ 19 ರವರೆಗೆ ಭಾರತದಲ್ಲಿ 257 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಪ್ರಸ್ತುತ COVID ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದೆ.

ಇದರ ನಡುವೆ ರಾಜ್ಯದಲ್ಲಿ ಕೊರೊನಾ ವೈರಸ್ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಕಳೆದ 20 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಹೆಚ್ಚಳ ಕಂಡುಬಂದಿದೆ. ಹೀಗಾಗಿ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ವಹಿಸಿಕೊಳ್ಳಬೇಕು ಎಂದು ಇಲಾಖೆ ಸಲಹೆ ನೀಡಿದೆ. 2025 ರಲ್ಲಿ ಈವರೆಗೆ ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿಲ್ಲ. ಆದರೂ, ಸೋಂಕು ಮತ್ತಷ್ಟು ಹರಡುವುದನ್ನು ತಡೆಯಲು ಎಚ್ಚರಿಕೆ ವಹಿಸಬೇಕಾದ್ದುಅಗತ್ಯ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಗರ್ಭಿಣಿಯರು, ಮಕ್ಕಳು, ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಿ ಓಡಾಡಲು ಸೂಚನೆ ನೀಡಲಾಗಿದೆ.
ತೀವ್ರ ಉಸಿರಾಟದ ಕಾಯಿಲೆಯ ಲಕ್ಷಣಗಳನ್ನು ಹೊಂದಿರುವವರು ಸಕಾಲಿಕವಾಗಿ ಚಿಕಿತ್ಸೆಯನ್ನು ಪಡೆಯಬೇಕು. ಸಂಭಾವ್ಯ ಅಪಾಯ ತಡೆಗಟ್ಟಲು ಕೋವಿಡ್ ಪರೀಕ್ಷೆಯನ್ನು ತಕ್ಷಣವೇ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.