ಮಂಗಳೂರು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಮಂಜನಾಡಿ ಫಯಾನ್ ಅಂದರ್

ಕರಾವಳಿ

ಕಳ್ಳತನ, ಕೊಲೆಯತ್ನ, ಜೈಲಿನಲ್ಲಿ ಹಲ್ಲೆ ಸೇರಿದಂತೆ 24 ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ

ಕಳ್ಳತನ, ಕೊಲೆಯತ್ನ, ಜೈಲಿನಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ಬಳಿಕ ನ್ಯಾಯಾಲಯಕ್ಕೆ ಹಾಜರಾಗಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಮಂಜನಾಡಿ ಕಲ್ಕಟ್ಟ, ಬದ್ರಿಯ ನಗರ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ. ಈತನ ಮೇಲೆ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಉಪ್ಪಿನಂಗಡಿ, ಕಡಬ, ಪುತ್ತೂರ ನಗರ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಛೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿರುವುದಲ್ಲದೇ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಕಾರಾಗೃಹದೊಳಗೆ ಇತರ ಖೈದಿಗಳಿಗೆ ಹಲ್ಲೆ ನಡೆಸಿರುವುದಲ್ಲದೇ ಜೈಲು ಸಿಬ್ಬಂದಿಯವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನ ನಡೆಸಿದ ಪ್ರಕರಣ ಸೇರಿದಂತೆ ಒಟ್ಟು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.

ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿನ ಪ್ರಕರಣಗಳಲ್ಲಿ ನ್ಯಾಯಾಲಯದ ಒಟ್ಟು 24 ವಾರಂಟ್ ಇದೆ. ಈತನ ಮೇಲೆ ಕೇರಳ ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಸಹ ಹಲವಾರು ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.