ಭೀಕರ ರಸ್ತೆ ಅಪಘಾತ: ಆಂಧ್ರಪ್ರದೇಶ ಪೊಲೀಸ್ ಇಲಾಖೆಯ ಇಬ್ಬರು ಡಿವೈಎಸ್‌ಪಿಗಳು ಸಾವು. ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರಿಗೆ ಗಾಯ

ರಾಷ್ಟ್ರೀಯ

ಶನಿವಾರದಂದು ಹೈದರಾಬಾದ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಧ್ರಪ್ರದೇಶ ಪೊಲೀಸ್ ಇಲಾಖೆಯ ಇಬ್ಬರು ಡಿವೈಎಸ್‌ಪಿಗಳು ಸಾವನ್ನಪ್ಪಿದ್ದು, ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.
ಪೊಲೀಸ್ ಅಧಿಕಾರಿಗಳು ಅಧಿಕೃತ ಕೆಲಸದ ನಿಮಿತ್ತ ವಿಜಯವಾಡದಿಂದ ಹೈದರಾಬಾದ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಾಲಕ ಹಠಾತ್ ಬ್ರೇಕ್ ಹಾಕಿದಾಗ, ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸುವಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು ರಸ್ತೆಯ ಇನ್ನೊಂದು ಬದಿಗೆ ಬಿದ್ದು, ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಂಧ್ರಪ್ರದೇಶ ಪೊಲೀಸರ ಗುಪ್ತಚರ ಭದ್ರತಾ ವಿಭಾಗದಲ್ಲಿ ಕೆಲಸ ಮಾಡುವ ಇಬ್ಬರು ಡಿವೈಎಸ್ಪಿಗಳು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ವಾಹನ ಚಾಲಕ ಗಾಯಗೊಂಡಿದ್ದಾರೆ. ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.