ಜನರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರಿ ಅಧಿಕಾರಿಗಳನ್ನು ಸ್ಥಳೀಯ ಶಾಸಕರ ಸಲಹೆ, ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಾಗುವುದಿಲ್ಲ: ಕರ್ನಾಟಕ ಹೈಕೋರ್ಟ್

ರಾಜ್ಯ

ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದ ಆರೋಪ ಹೊತ್ತ ಸರ್ಕಾರಿ ಅಧಿಕಾರಿಗಳನ್ನು ಸ್ಥಳೀಯ ಶಾಸಕರ ಸಲಹೆ, ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಗ್ರೇಡ್ -1 ತಹಶೀಲ್ದಾರ್ ವೆಂಕಟೇಶಪ್ಪ ಅವರು ತಮ್ಮನ್ನು ಅವಧಿಪೂರ್ವ ವರ್ಗಾವಣೆ ಮಾಡಿದ್ದ ಕ್ರಮ ಎತ್ತಿ ಹಿಡಿದಿದ್ದ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್ ಜಿ ಪಂಡಿತ್ ಮತ್ತು ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ವಜಾಗೊಳಿಸಿದೆ.

ಅವಧಿಪೂರ್ವ ವರ್ಗಾವಣೆ ಮಾಡಿದ್ದರೂ ಅವರ ವಿರುದ್ಧ ಕಚೇರಿಗೆ ಸಮಯಕ್ಕೆ ಸರಿಯಾಗಿ ಬಾರದಿರುವುದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದಿರುವ ಕಾರಣದಿಂದ ಸ್ಥಳೀಯರು ಶಾಸಕರಿಗೆ ದೂರು ನೀಡಿದ್ದರು. ಈ ದೂರಿನ ಭಾಗವಾಗಿ ತಹಶೀಲ್ದಾರ್‌ ವೆಂಕಟೇಶಪ್ಪ ಅವರನ್ನು ವರ್ಗಾವಣೆ ಮಾಡುವಂತೆ ಸ್ಥಳೀಯ ಶಾಸಕರು ಕಂದಾಯ ಸಚಿವರಿಗೆ ಮನವಿ ಮಾಡಿದ್ದರು. ಈ ವರ್ಗಾವಣೆಯನ್ನು ಕೆಎಟಿ ಎತ್ತಿಹಿಡಿದಿದೆ. ಈ ಆದೇಶದಲ್ಲಿ ಯಾವುದೇ ಕಾನೂನು ಉಲ್ಲಂಘನೆ ಮತ್ತು ದೋಷವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ 2024ರ ಮಾರ್ಗಸೂಚಿ ಪ್ರಕಾರ ವಿಶೇಷ ಅಥವಾ ಅಸಾಮಾನ್ಯ ಕಾರಣಗಳಿಂದ ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆದು ವರ್ಗಾವಣೆ ಮಾಡುವುದಕ್ಕೆ ಅವಕಾಶವಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳಿಂದ ಅನುಮತಿ ಪಡೆದ ಬಳಿಕವೇ ವರ್ಗಾವಣೆ ಮಾಡಲಾಗಿದೆ ಎಂದು ದಾಖಲೆಗಳು ಹೇಳುತ್ತವೆ ಎಂದು ಪೀಠ ಹೇಳಿದೆ.

ಹಾಲಿ ವರ್ಗಾವಣೆ ಪ್ರಕರಣದಲ್ಲಿ ದುರುದ್ದೇಶಪೂರಿತ ಎಂಬ ಆರೋಪಕ್ಕೆ ಯಾವುದೇ ಆಧಾರಗಳಿಲ್ಲ. ಅರ್ಜಿದಾರರು ವರ್ಗಾವಣೆಗೆ ಹೊಣೆಗಾರರಾಗಿದ್ದು, ಅವರನ್ನು ಕೋಲಾರ ಜಿಲ್ಲೆಯಲ್ಲಿ ಮತ್ತೊಂದು ಸ್ಥಳಕ್ಕೆ ನಿಯೋಜನೆ ಮಾಡಲಾಗಿದೆ. ಆದ್ದರಿಂದ, ಅವರಿಗೆ ಯಾವುದೇ ತೊಂದರೆಯಾಗಿಲ್ಲ” ಎಂದು ಪೀಠ ತಿಳಿಸಿದೆ.

2024ರ ಜುಲೈ 31ರಿಂದ ಕೋಲಾರ ಜಿಲ್ಲೆಯ ಬಂಗಾರಪೇಟೆಯ ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿದಾರರು ಗ್ರೇಡ್ -1 ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅರ್ಜಿದಾರರ ವಿರುದ್ಧ ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗದಿರುವುದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದೆ ಇರುವ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಬಂಗಾರಪೇಟೆ ಕ್ಷೇತ್ರದ ಶಾಸಕರು, ಕಂದಾಯ ಸಚಿವರಿಗೆ ಪತ್ರ ಬರೆದಿದ್ದರು. ಆ ಮೂಲಕ ಅರ್ಜಿದಾರರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಮತ್ತೊಬ್ಬ ಅಧಿಕಾರಿಯನ್ನು ನಿಯೋಜನೆ ಮಾಡುವಂತೆ ಕೋರಿದ್ದರು. ಅದರಂತೆ ಅರ್ಜಿದಾರರನ್ನು 2024ರ ಡಿಸೆಂಬರ್ 13ರಂದು ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು.