ಸುರತ್ಕಲ್ ಪೊಲೀಸ್ ಠಾಣೆ ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನ ಕಳವು ಗೈದಿದ್ದ ಅಂತರ್ ರಾಜ್ಯ ಕಳವು ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ ತಿರುವನಂತಪುರಂ ಜಿಲ್ಲೆಯ ರಾತಿಕ್ಕಲ್ ವರ್ಕಲಾ ಗ್ರಾಮದ ನಿವಾಸಿ ಹಂಝ ಕುಪ್ಪಿಕಂಡ ಯಾನೆ ಹಂಝ ಯಾನೆ ಹಂಝ ಪೊನ್ನನ್ (29) ಎಂದು ತಿಳಿದು ಬಂದಿದೆ.
ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಸಮಯ ಆತನು ಚಲಾಯಿಸುತ್ತಿದ್ದ ಬೈಕ್‌ಗೆ ಯಾವುದೇ ದಾಖಲಾತಿಗಳಿಲ್ಲದೇ ಇದ್ದು, ಬೈಕ್‌ನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಫಾರಂ ಮಾಲ್ ಬಳಿಯಿಂದ ಕಳ್ಳತನ ಮಾಡಿರುವುದಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2023 ರಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಈತನು ದಿನಾಂಕ: 30-09-2025 ರಂದು ಕುಳಾಯಿ ಬಳಿಯಿಂದ KA-19-AE-8017 ನೇ ನಂಬ್ರದ ಪಿಕಪ್ ವಾಹನವನ್ನು ಕಳವು ಮಾಡಿರುವುದು ತನಿಖೆಯಿಂದ ತಿಳಿದುಬಂದಂತೆ ಈ ಎರಡು ವಾಹನಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿರುತ್ತಾರೆ.

ಈ ಸಂದರ್ಭ ಆರೋಪಿಯು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಮಾಡಿ ಅದರಲ್ಲಿ ಸುತ್ತಾಡುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈತನ ವಿರುದ್ದ ಕೇರಳ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೊಬೈಲ್ ಕಳ್ಳತನ, ವಾಹನ ಕಳ್ಳತನ ಸೇರಿದಂತೆ ಸುಮಾರು 17 ಪ್ರಕರಣಗಳು ದಾಖಲಾಗಿರುತ್ತದೆ. ಸುರತ್ಕಲ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಶಿಧರ ಶೆಟ್ಟಿ, ಎಎಸ್‌ಐ ರಾಜೇಶ್ ಆಳ್ವ, ಸಿಬ್ಬಂದಿಯವರಾದ ಉಮೇಶ್, ವಿನೋದ್ ಕುಮಾರ್, ನಾಗರಾಜ್, ಸುನೀಲ್ ಕುಮಾರ್ ರವರು ಆರೋಪಿ ಪತ್ತೆ ಕಾರ್ಯಾಚರಣೆಯಲ್ಲಿ ಬಾಗವಹಿಸಿದ್ದರು.
