ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ, ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್: ಸಾರಿಗೆ ಸಚಿವರು

ರಾಜ್ಯ

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (ಆರ್​​ಟಿಒ) ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಹೊಣೆಯಾಗಿಸಿ ಅವರನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ವಿಧಾನ ಪರಿಷತ್​ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರ್​ಟಿಒನಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಪರವಾನಗಿ, ಕಲಿಕಾ ಪರವಾನಗಿ ಸೇರಿದಂತೆ 24 ಸೇವೆಗಳನ್ನು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಅವಕಾಶ ಕಲ್ಪಿಸುವಂತೆ ಮಾಡಲಾಗಿದೆ. ಆದಾಗ್ಯೂ ಆರ್​ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳು ಇರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಜವಾಬ್ದಾರಿಯನ್ನಾಗಿ ಮಾಡಿ ಅಮಾನತುಗೊಳಿಸಲಾಗುವುದು ಎಂದರು.

ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಕಚೇರಿಯ ಅಧಿಕಾರಿ ಅಥವಾ ಸಿಬ್ಬಂದಿಗಳನ್ನು ಭೇಟಿ ಮಾಡಿ, ಅವರ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ಆರ್​ಟಿಒ ಕಚೇರಿಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.