ಸ್ಥಳೀಯ ಸಂಸ್ಥೆಗಳ ಚುನಾವಣೆ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು

ರಾಜ್ಯ

ರಾಜ್ಯದಲ್ಲಿ ಚುನಾವಣೆ ನಡೆಯಬೇಕಿರುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಹಾಗೂ‌ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸುವ ಸಂಬಂಧ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು ನೀಡಿದೆ. ಚುನಾವಣೆಗಾಗಿ ಮೀಸಲಾತಿ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ‘ರಾಜ್ಯದಲ್ಲಿನ 187 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಈಗಾಗಲೇ ಪೂರ್ಣಗೊಂಡಿದೆ. ಬಹುತೇಕ ಗ್ರಾಮ ಪಂಚಾಯಿತಿಗಳ ಅವಧಿ ಮಾಸಾಂತ್ಯದಲ್ಲಿ ಪೂರ್ಣಗೊಳ್ಳಲಿದೆ. ಸಕಾಲದಲ್ಲಿ ಚುನಾವಣೆ ನಡೆಸುವುದಕ್ಕಾಗಿ, ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದು ಆಕ್ಷೇಪಿಸಿದರು.

‘ರಾಜ್ಯದಲ್ಲಿ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿ ಹಾಗೂ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕಿದೆ. ಅವಧಿ ಪೂರ್ಣಗೊಂಡಿರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ರಾಜ್ಯ ಸರ್ಕಾರದ ಪರ ವಕೀಲರು, ‘ಮೀಸಲಾತಿ ಸಿದ್ಧಪಡಿಸುವ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಅರ್ಜಿ ವಿಚಾರಣೆಯನ್ನು ಅಲ್ಪಾವಧಿಗೆ ಮುಂದೂಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಉತ್ತರಿಸಲು ಅಂತಿಮ ಕಾಲಾವಕಾಶ ನೀಡಿ ವಿಚಾರಣೆಯನ್ನು ಫೆಬ್ರವರಿ 5ಕ್ಕೆ ಮುಂದೂಡಿತು.