ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸ್ವತಂತ್ರ ನ್ಯಾಯಾಂಗ) ತನಿಖೆಗೆ ವಹಿಸಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ, ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್-ಕರ್ನಾಟಕ’ (PUCL) ಸಂಘಟನೆಯ ಪ್ರಧಾನ ಕಾರ್ಯದರ್ಶಿ ಇ. ಶುಜಾಯುತ್ ಉಲ್ಲಾ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಮಧು ಭೂಷಣ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಪ್ರಕರಣದ ಸಮಗ್ರ ತನಿಖೆ ನಡೆಸಿ ಜೂನ್ 8ರೊಳಗೆ ವರದಿ ಸಲ್ಲಿಸಬೇಕು ಎಂದು ಆದೇಶಿಸಿರುವ ನ್ಯಾಯಪೀಠ, ಮ್ಯಾಜಿಸ್ಟ್ರೇಟ್ ವರದಿಯಲ್ಲಿ, ಪೊಲೀಸರು ಅನುಸರಿಸಿದ ಕಾರ್ಯವಿಧಾನದಲ್ಲಿ ಏನಾದರೂ ಅಂತರ ಕಂಡುಬಂದರೆ, ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಬಿಐಗೆ ವಹಿಸಲಾಗುವುದು ಎಂಬ ಅಭಿಪ್ರಾಯವನ್ನು ಮೌಖಿಕವಾಗಿ ವ್ಯಕ್ತಪಡಿಸಿದೆ.
ಬಿಹಾರ ಮೂಲದ ರಿತೇಶ್ ಕುಮಾರ್ ಎಂಬಾತ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ. ಆತನನ್ನು ಘಟನಾ ಸ್ಥಳಕ್ಕೆ ಮಹಜರು ಮಾಡಲು 2025ರ ಏಪ್ರಿಲ್ 13ರಂದು ಕರೆದೊಯ್ದಿದ್ದಾಗ ತಪ್ಪಿಸಿಕೊಳ್ಳಲು ಯತ್ನಿಸಿದ ಎಂಬ ಕಾರಣಕ್ಕೆ ಪೊಲೀಸರು ಗುಂಡು ಹಾರಿಸಿ ಎನ್‌ಕೌಂಟರ್ ಮಾಡಿದ್ದರು.
