ರಾಜ್ಯದ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಬಗೆಹರಿಯುವ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿದಿರುವ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿಗೆ ಕಸರತ್ತು ನಡೆಸಿದರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಲ ಪ್ರದರ್ಶನದ ತಂತ್ರ ಹೆಣೆದಿದ್ದಾರೆ. ಸಿಎಂ ಹಾಗೂ ಡಿಸಿಎಂ ನಡುವಿನ ನಾಯಕತ್ವ ಬಿಕ್ಕಟ್ಟು ತೀವ್ರಗೊಂಡಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗೊಂದಲಗಳಿಗೆ ತೆರೆ ಎಳೆಯುವಂತೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೆ. ಹೀಗಾಗಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ನಾಯಕತ್ವ ಬದಲಾವಣೆಯ ವಿಚಾರ ಸದ್ಯಕ್ಕೆ ಅಪ್ರಸ್ತುತ. ಒಂದು ವೇಳೆ ಅಂತಹ ಸಂದರ್ಭ ಎದುರಾದರೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ನಾವೆಲ್ಲರೂ ಚರ್ಚಿಸಿ ತೀರ್ಮಾನ ಮಾಡುತ್ತೇವೆ,” ಎಂದು ಹೇಳಿದ್ದಾರೆ. ಹೈಕಮಾಂಡ್ ನಿರ್ಧಾರವೇ ಅಂತಿಮ. ಸೋನಿಯಾ ಗಾಂಧಿ ಅವರ ತೀರ್ಮಾನವೇ ಅಂತಿಮ. ಸಿಎಂ ಬದಲಾವಣೆಗೆ ಇನ್ನೂ ಸಮಯವಿದೆ, ಆ ಕಾಲ ಬಂದಾಗ ನೋಡೋಣ ಎಂದಿದ್ದಾರೆ.
