ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯ ಕಳ್ಳತನ ಪ್ರಕರಣ: ಎಂಟು ಮಂದಿ ಆರೋಪಿಗಳ ಬಂಧನ

ರಾಷ್ಟ್ರೀಯ

ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷ ತನಿಖಾ ತಂಡ ನೀಡಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟಿನ ಸದಸ್ಯ ಕೃಷ್ಣ ಮೋಹನ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಬಂಧಿತ ಆರೋಪಿಗಳನ್ನು ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಲವಕುಶ್ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುಣೇಶ್ ಪಾಂಡೆ, ರಮಾಶಂಕರ್ ಮಿಶ್ರಾ, ಸುಭಾಷ್ ಶ್ರೀವಾಸ್ತವ ಮತ್ತು ರಾಮ್ ಶಂಕರ್ ಯಾದವ್ ಅಲಿಯಾಸ್ ಟಿನ್ನು ಎಂದು ಗುರುತಿಸಲಾಗಿದೆ. ಎಫ್‌ಐಆರ್ ನ ಇತರ ಕೆಲವು ಅಪರಿಚಿತ ವ್ಯಕ್ತಿಗಳ ಹೆಸರನ್ನೂ ಉಲ್ಲೇಖಿಸಲಾಗಿದೆ. ಆರೋಪಿಗಳ ವಿರುದ್ಧ ಕಳ್ಳತನ, ವಿಶ್ವಾಸದ್ರೋಹ, ಕದ್ದ ಆಸ್ತಿಯನ್ನು ಮರೆಮಾಡುವುದು ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ದೇಣಿಗೆ ದುರುಪಯೋಗದ ಬಗ್ಗೆ ಟ್ರಸ್ಟ್ ಮಾಡಿದ ಮನವಿಯ ಮೇರೆಗೆ ಉತ್ತರ ಪ್ರದೇಶ ಸರ್ಕಾರ ಜೂನ್ 13 ರಂದು ಎಸ್‌ಐಟಿ ರಚಿಸಿತ್ತು. ಇದಕ್ಕೂ ಮುನ್ನ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮಂದಿರದ ಕೋಟ್ಯಂತರ ರೂಪಾಯಿ ದೇಣಿಗೆ ನಾಪತ್ತೆಯಾಗಿದೆ ಎಂದು ಆರೋಪಿಸಿ, ನ್ಯಾಯಾಲಯಗಳು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿಎಚ್ ಪಿ ಮುಖ್ಯಸ್ಥ ಅಲೋಕ್ ಕುಮಾರ್, ಮುಂಬರುವ 2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಎಸ್ಪಿ ಮತ್ತು ಕಾಂಗ್ರೆಸ್ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿವೆ ಎಂದು ತಿರುಗೇಟು ನೀಡಿದ್ದರು.