ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಸಪ್ಲೆಯರ್ ಅಣ್ಣಪ್ಪ ಸ್ವಾಮಿ @ ಮನು, ಹೊಸಮನೆ ನಿಲಯ, ಇಡ್ಯಾ, ಕುಲಾಯಿ ಹೊಸಬೆಟ್ಟು, ಸುರತ್ಕಲ್. ಹಾಲಿ ವಾಸ: ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿ ಬಾಡಿಗೆ ಮನೆ ನಿವಾಸಿ, ಈತನನ್ನು ಮಾಲು ಸಮೇತ ಬಂಧಿಸಿರುತ್ತಾರೆ.
ಬಂಧಿತನಿಂದ ಸುಮಾರು 1,50,000 ರೂ. ಮೌಲ್ಯದ 15 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,10,500 ರೂ.ಎಂದು ಅಂದಾಜಿಸಲಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಅಣ್ಣಪ್ಪ ಸ್ವಾಮಿ @ ಮನು ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ ಠಾಣೆಗಳಲ್ಲಿ ಎನ್.ಡಿ.ಪಿ. ಎಸ್ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಮಸೀದಿಗೆ ಕಲ್ಲು ಎಸೆದಿರುವ ಪ್ರಕರಣ ಮತ್ತು ಉಳ್ಳಾಲ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ.
ಈ ಯಶಸ್ವಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸಿದ್ದು, ಈ ಮಾದಕವಸ್ತು ಮಾರಾಟ, ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
