ಅಕ್ರಮ ಮರಳುಗಾರಿಕೆಯಲ್ಲಿ ಸಿಕ್ಕಿ ಬಿದ್ದರೆ ಗೂಂಡಾ ಕಾಯ್ದೆ ಫಿಕ್ಸ್; ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧವೂ ನಿರ್ದಾಕ್ಷಿಣ್ಯ ಶಿಸ್ತು ಕ್ರಮ

ರಾಜ್ಯ

ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಸಚಿವರ ಸೂಚನೆಯ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರು ರಾಜ್ಯದ ಎಲ್ಲಾ ಪೊಲೀಸ್ ಉನ್ನತ ಅಧಿಕಾರಿಗಳಿಗೆ ಕಟ್ಟುವಿಟ್ಟಿನ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆಯು ನೈಸರ್ಗಿಕ ಪರಿಸರವನ್ನು ನಾಶಪಡಿಸುವುದಲ್ಲದೆ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಖಜಾನೆಗೆ ಧಕ್ಕೆ ತರುತ್ತಿದೆ. ಹೀಗಾಗಿ ಇಂತಹ ಅಕ್ರಮಗಳ ವಿರುದ್ಧ ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ಅನುಸರಿಸಲಾಗುತ್ತಿದ್ದು, ರಾಜ್ಯಾದ್ಯಂತ ಈ ಕಟ್ಟುನಿಟ್ಟಿನ ನಿಯಮಗಳನ್ನು ತಕ್ಷಣದಿಂದಲೇ ಜಾರಿಗೊಳಿಸಲು ಸೂಚಿಸಲಾಗಿದೆ.

“ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿ ಮಾತ್ರವಲ್ಲ, ಇದು ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸವಾಲು ಎಸೆಯುವ ಗಂಭೀರ ಅಪರಾಧವಾಗಿದೆ. ಸರ್ಕಾರ ಯಾವುದೇ ಅಕ್ರಮ ಚಟುವಟಿಕೆಯನ್ನು ಸಹಿಸುವುದಿಲ್ಲ. ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದರ ಜೊತೆಗೆ ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧವೂ ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು.” ಎಂದು ಗೃಹ ಸಚಿವರು ಹೇಳಿದ್ದಾರೆ.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ‘ಟಾಸ್ಕ್ ಫೋರ್ಸ್’ ಸಮಿತಿಗಳನ್ನು ಮತ್ತಷ್ಟು ಸಕ್ರಿಯಗೊಳಿಸಲು ಸೂಚಿಸಲಾಗಿದೆ. ಅಕ್ರಮ ಮರಳು ದಂಧೆ ನಡೆಯುವ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ನಿರಂತರ ಕಣ್ಗಾವಲು ಇಡುವುದು ಹಾಗೂ ಅಕ್ರಮ ಸಾಗಾಣಿಕೆಯನ್ನು ತಡೆಯುವುದು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ನೇರ ಜವಾಬ್ದಾರಿಯಾಗಿದೆ. ರಾಜ್ಯದ ಗಡಿ ಭಾಗಗಳಲ್ಲಿ ನಡೆಯುವ ಅಂತರರಾಜ್ಯ ಅಕ್ರಮ ಮರಳು ಸಾಗಾಣಿಕೆಗೆ ತಡೆ ಒಡ್ಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಗಳೊಂದಿಗೆ ಜಂಟಿಯಾಗಿ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವಂತೆ ನಿರ್ದೇಶಿಸಲಾಗಿದೆ. ಗಡಿ ತನಿಖಾ ಠಾಣೆಗಳ ತಪಾಸಣೆ ನಡೆಸಿ, ಮೂಲಸೌಕರ್ಯಗಳ ಕೊರತೆಯಿದ್ದರೆ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರಲು ಸೂಚಿಸಲಾಗಿದೆ.

ಪ್ರತಿ ಪೊಲೀಸ್ ಘಟಕವು ತನ್ನ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಮರಳು ಚಟುವಟಿಕೆಗಳ ಕುರಿತು ಗುಪ್ತಚರ ಮಾಹಿತಿ ಸಂಗ್ರಹಿಸಬೇಕು ಮತ್ತು ಯಾವುದೇ ಮುನ್ಸೂಚನೆ ಇಲ್ಲದೆ ದಿಢೀರ್ ದಾಳಿ ನಡೆಸಬೇಕು. ಈ ಅಕ್ರಮ ದಂಧೆಯಲ್ಲಿ ನಿರಂತರವಾಗಿ ಭಾಗಿಯಾಗಿರುವ ಕುಖ್ಯಾತ ವ್ಯಕ್ತಿಗಳ ವಿರುದ್ಧ ‘ಗೂಂಡಾ ಕಾಯ್ದೆ’ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಪ್ರತಿ ತಿಂಗಳು ನಡೆಯುವ ಅಪರಾಧ ಪರಿಶೀಲನಾ ಸಭೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ, ಸಾಗಾಣಿಕೆ ಹಾಗೂ ಸಂಗ್ರಹಣೆಗೆ ಸಂಬಂಧಿಸಿದ ಪ್ರಕರಣಗಳನ್ನು ಠಾಣಾವಾರು ವಿಮರ್ಶಿಸಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಿಯಮಿತವಾಗಿ ನಡೆಸಿ, ಇಲಾಖೆಗಳ ನಡುವೆ ಸಮನ್ವಯ ಕಾಯ್ದುಕೊಳ್ಳಬೇಕು.

ಯಾವುದೇ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ತಡೆಯುವಲ್ಲಿ ಲೋಪ ಕಂಡುಬಂದಲ್ಲಿ ಅಥವಾ ವಿಫಲವಾದರೆ, ನೇರವಾಗಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧವೇ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಸರ್ಕಾರ ತೀವ್ರ ಎಚ್ಚರಿಕೆ ನೀಡಿದೆ.