ಹಾಸನದಿಂದ ಮಂಗಳೂರು ಕಡೆಗೆ ಮಾದಕವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ, ದಿನಾಂಕ 16.08.2026 ರಂದು ರಾತ್ರಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು KA-01-MA-1284 ನೋಂದಣಿಯ ಕಾರೊಂದನ್ನು ತಡೆದು, ಕಾರಿನ ಚಾಲಕನ ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ಆತನು ಕಾರಿನಲ್ಲಿ ಮಾದಕವಸ್ತು ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿರುತ್ತಾನೆ.
ನಂತರ ಪೊಲೀಸರು ಕಾರನ್ನು ತಪಾಸಣೆ ನಡೆಸಿ ವಾಹನದೊಳಗಡೆ ಇದ್ದ 538.63 ಗ್ರಾಂ MDMA ಮತ್ತು 99.12 ಗ್ರಾಂ ಕೊಕೈನ್ ಹಾಗೂ ಖಾಲಿ ಪ್ಲಾಸ್ಟಿಕ್ ಡಬ್ಬಿಗಳು, ಡಿಜಿಟಲ್ ತೂಕದ ಯಂತ್ರ, ಸೇರಿದಂತೆ ಇತರೆ ಸೊತ್ತುಗಳು ವಶಪಡಿಸಿಕೊಂಡಿರುತ್ತಾರೆ. ಮಾದಕ ವಸ್ತು MDMA ನ ಅಂದಾಜು ಮೌಲ್ಯ 53,86,300. ರೂ. ಹಾಗೂ ಕೊಕೈನ್ ಇದರ ಮೌಲ್ಯ 49,56,000 ರೂ. ಆಗಿದ್ದು, ಇತರೆ ವಶಪಡಿಸಿಕೊಂಡ ಸ್ವತ್ತುಗಳ ಮೌಲ್ಯ ಸೇರಿದಂತೆ ಒಟ್ಟು 1,05,59,450. ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 113/2026, ರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
