ಡಿಸೆಂಬರ್ ತಿಂಗಳ ಒಳಗಾಗಿ ರಾಜ್ಯದ ಎಲ್ಲಾ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತ್ ಗಳಿಗೆ ಸಾರ್ವತ್ರಿಕ ಚುನಾವಣೆ

ರಾಜ್ಯ

ಕರಾವಳಿಯಲ್ಲಿ ಪ್ರಥಮ ಬಾರಿಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿಗೆ ಬೃಹತ್ ಯೋಜನೆಗಳನ್ನು ಘೋಷಣೆ ಮಾಡಿದೆ. ಜೊತೆಗೆ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ವರದಿ ಆಗಿದೆ.ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಮುಂಬರುವ ಡಿಸೆಂಬರ್ ತಿಂಗಳ ಒಳಗಾಗಿ ರಾಜ್ಯದ ಎಲ್ಲಾ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.

ಸಂಪುಟ ಸಭೆಯ ಬಳಿಕ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಆಡಳಿತಾವಧಿ ಮುಗಿದಿದ್ದು, ಹೀಗಾಗಿ ಡಿಸೆಂಬರ್ ಅಂತ್ಯದೊಳಗೆ ಪ್ರಕ್ರಿಯೆ ಮುಗಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ. ಅಲ್ಲದೇ ಈ ಬಾರಿಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಾಗಿ ಮತಪೆಟ್ಟಿಗೆಗಳನ್ನು ಬಳಸಲು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯವಿರುವ ನೂತನ ಮತಪೆಟ್ಟಿಗೆಗಳ ಖರೀದಿ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಲು 151.31 ಕೋಟಿ ರೂಪಾಯಿಗಳ ಆಡಳಿತಾತ್ಮಕ ವೆಚ್ಚಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.