ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು LSD (Lysergic Acid Diethylamide) ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಬಂಧಿಸಿ, ಸುಮಾರು 3 ಲಕ್ಷ ರೂ. ಮೌಲ್ಯದ 100 ಡ್ರಗ್ಸ್ ಸ್ಟ್ರಿಪ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.
ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಡ್ರಗ್ಸ್ ಸ್ಟ್ರಿಪ್ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಿನಾಂಕ 03-11-2026 ರಂದು ಮದ್ಯಾಹ್ನ ಮಂಗಳೂರು ನಗರದ ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಕಾರ್ಯಾಚರಣೆ ನಡೆಸಿ, ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್, ತುಂಬೆ ಪ್ಲಾಜಾ, ಅಳಪೆ, ಪಡೀಲ್ ಮತ್ತು ಸಿದ್ದಾರ್ಥ ಶೆಟ್ಟಿ ದಡ್ಡಲ್ ಕಾಡ್, ಉರ್ವಸ್ಟೋರ್, ಎಂಬವರನ್ನು ಬಂಧಿಸಿ, ಬಂಧಿತರಿಂದ ಸುಮಾರು 3 ಲಕ್ಷ ರೂ. ಮೌಲ್ಯದ 100 ಡ್ರಗ್ಸ್ ಸ್ಟ್ರಿಪ್ ಹಾಗೂ 3 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 3,35,000. ಎಂದು ಅಂದಾಜಿಸಲಾಗಿದೆ. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಆರೋಪಿಗಳಾಗ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ ಮತ್ತು ಸಿದ್ದಾರ್ಥ ಶೆಟ್ಟಿ ದಡ್ಡಲ್ ಕಾಡ್, ಇವರ ಮೇಲೆ ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳು ದಾಖಲಿದ್ದು, ಆರೋಪಿ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ ಎಂಬಾತನ ವಿರುದ್ಧ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಮಾರಾಟ ಮಾಡಿದ ಪ್ರಕರಣ ದಾಖಲಾಗಿರುತ್ತದೆ. ಹಾಗೂ ಆರೋಪಿ ಸಿದ್ದಾರ್ಥ ಶೆಟ್ಟಿ ಎಂಬಾತನ ವಿರುದ್ಧ ಮಂಗಳೂರು ನಗರದ ಬರ್ಕೆ ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ಗಲಾಟೆ, ಕೊಲೆಯತ್ನ, ಗಾಂಜಾ ಮಾರಾಟ ಸೇರಿದಂತೆ ಒಟ್ಟು 09 ಪ್ರಕರಣಗಳು ದಾಖಲಾಗಿರುತ್ತವೆ.
ಈ ಮಾದಕವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಮಂದಿ ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಪತ್ತೆ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.
