ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮೀಸಲಿಗೆ ಎರಡು ಸಾವಿರಕ್ಕೂ ಅಧಿಕ ಆಕ್ಷೇಪ ಸಲ್ಲಿಕೆ: ಸಚಿವ ಈಶ್ವರ ಖಂಡ್ರೆ

ರಾಜ್ಯ

ರಾಜ್ಯ ಸರಕಾರವು ಅಧಿಕಾರ ವಿಕೇಂದ್ರೀಕರಣದ ಪರವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಈಗಾಗಲೇ ಕರಡು ಮೀಸಲು ಅಧಿಸೂಚನೆ ಹೊರಡಿಸಿದೆ. ಮುಂಬರುವ ಜನವರಿಯೊಳಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗೆ ಚುನಾವಣೆ ನಡೆದೇ ನಡೆಯುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟವಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ‘‘ಬಹುತೇಕ ಜನವರಿ ಮೊದಲ ಅಥವಾ 2 ನೇ ವಾರದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ನಡೆಯುತ್ತವೆ. ಈ ಚುನಾವಣೆಗಳ ತರುವಾಯ ಗ್ರಾಮ ಪಂಚಾಯಿತಿ ಚುನಾವಣೆಯೂ ನಡೆಯಲಿದೆ,’’ ಎಂದು ಹೇಳಿದರು.

‘‘ಈಗಾಗಲೇ ಜಿಲ್ಲಾಪಂಚಾಯಿತಿ, ತಾಲೂಕು ಪಂಚಾಯಿತಿ ಸ್ಥಾನಗಳಿಗೆ ಪ್ರವರ್ಗ ಮೀಸಲು ಕರಡು ಅಧಿಸೂಚನೆ ಹೊರಡಿಸಿ ಕಳೆದ ಅಕ್ಟೋಬರ್ 19 ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿತ್ತು. ಈ ಅವಧಿಯಲ್ಲಿ 2,000 ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಅಧಿಕಾರಿಗಳು ನಿಯಮಾನುಸಾರ ಅವುಗಳ ಪರಿಶೀಲನೆ ನಡೆಸುತ್ತಿದ್ದು, ಶೀಘ್ರವೇ ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ,’’ ಎಂದು ತಿಳಿಸಿದರು.