ಅಕ್ರಮವಾಗಿ ಶಸ್ತ್ರಾಸ್ತವನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರು ಗ್ಯಾಂಗ್ ಸ್ಟಾರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ಕಪ್ಪು ಬಣ್ಣದ ಕಾರಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧ ಪಿಸ್ತೂಲ್ ಇಟ್ಟುಕೊಂಡು ಯಾವುದೋ ದುಷ್ಕೃತ್ಯ ನಡೆಸುವುದಕ್ಕಾಗಿ ತಿರುಗಾಡುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಮಂಜೇಶ್ವರದ ಮೊಹಮ್ಮದ್ ಅಸ್ಗರ್ ಮತ್ತು ಅಬ್ದುಲ್ ನಿಸಾರ್.ಕೆ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಪಿಸ್ತೂಲ್, ಸಜೀವ ಮದ್ದುಗುಂಡುಗಳು, ಮೊಬೈಲ್ ಹಾಗೂ ಹುಂಡೈ ವರ್ಣ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 7,15,000 ರೂ.ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮೊಹಮ್ಮದ್ ಅಸ್ಗರ್ ಎಂಬಾತನ ವಿರುದ್ಧ ಈ ಹಿಂದೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಅಪಹರಣ, ಹಲ್ಲೆ ಪ್ರಕರಣ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ, ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟದ ಪ್ರಕರಣ, ಒಟ್ಟು 8 ಪ್ರಕರಣಗಳು ದಾಖಲಾಗಿರುತ್ತದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐ ಸುದೀಪ್ ಎಂ.ವಿ ನೇತೃತ್ವದಲ್ಲಿ ಸಿಸಿಬಿ ಸಿಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು
