ಜೈಲಿನಿಂದ ಹೊರಬಂದ ವೆಲೆನ್ಸಿಯಾ ಚರ್ಚ್ ಧರ್ಮಗುರು ಮೇಲೆ ಮತ್ತೊಂದು ಪೋಕ್ಸೊ ಪ್ರಕರಣ ದಾಖಲು

ಕರಾವಳಿ

ಫಾದರ್ ಸಿಪ್ರಿಯನ್ ಪಿಂಟೋಗೆ ಮತ್ತಷ್ಟು ಸಂಕಷ್ಟ

ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರೆರ್ ಚರ್ಚ್‌ನ ಧರ್ಮಗುರು ರೆ. ಫಾ. ಸಿಪ್ರಿಯನ್ ಪಿಂಟೋ ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣ ಭಾರೀ ಸುದ್ದಿ ಮಾಡಿತ್ತು. ಪೋಕ್ಸೊ ಪ್ರಕರಣ ದಾಖಲಾಗಿ ಜೈಲು ಫಾದರ್ ಜೈಲು ಪಾಲಾಗಿದ್ದರು. ಇದೀಗ ಜಾಮೀನು ಸಿಕ್ಕಿ ಜೈಲಿನಿಂದ ಹೊರ ಬರುತ್ತಿದ್ದಂತೆ ಮತ್ತೊಂದು ಪೋಕ್ಸೊ ಪ್ರಕರಣ ದಾಖಲಾಗಿದೆ.

ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಪ್ರತಿ ಭಾನುವಾರ ಪ್ರಾರ್ಥನೆಗೆ ತೆರಳುತ್ತಿದ್ದ 13 ವರ್ಷದ ಅಪ್ರಾಪ್ತ ಬಾಲಕನ ಮೇಲೆ 2026ರ ಮೇ 13ರಂದು ಲೈಂಗಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಸಂತ್ರಸ್ತ ಬಾಲಕನ ಪರವಾಗಿ ಬಂದಿರುವ ದೂರಿನ ಆಧಾರದ ಮೇರೆಗೆ ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 75(2) ಹಾಗೂ ಪೋಕ್ಸೊ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ (ಅಪರಾಧ ಸಂಖ್ಯೆ 50/2026) ದಾಖಲಾಗಿದೆ.

ಈ ಹಿಂದೆ 2026 ಅಕ್ಟೋಬರ್ 15 ರಂದು ಅಪ್ರಾಪ್ತ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಕ್ರೈಂ ನಂ. 212/2026) ಸಂಬಂಧಿಸಿದಂತೆ ಅಕ್ಟೋಬರ್ 18ರಂದು ಆರೋಪಿಯನ್ನು ಬಂಧಿಸಲಾಗಿತ್ತು. ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಫಾದರ್ ಇತ್ತೀಚೆಗಷ್ಟೇ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಬಂದಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ಬೆನ್ನಲ್ಲೇ ಇದೀಗ ಮತ್ತೊಂದು ಲೈಂಗಿಕ ದೌರ್ಜನ್ಯದ ದೂರು ದಾಖಲಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಈ ಎರಡನೇ ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಗೆ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.