ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ಎರಡು ಕೋಟಿ ರೂ. ಸುಲಿಗೆ ಪ್ರಕರಣ

ರಾಜ್ಯ

ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಭೂಗತ.

ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ್‌ ಫೂಲ್‌ ಸಿಂಗ್‌ ಚವ್ಹಾಣ್ ಅವರಿಂದ ಎರಡು ಕೋಟಿ ಸುಲಿಗೆ ನಡೆಸಿದ್ದ ಆರೋಪದಡಿಯಲ್ಲಿ ದಾಖಲಾಗಿರುವ ಪ್ರಕರಣದ ಇಬ್ಬರು ಆರೋಪಿಗಳನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಥಣಿಯ ಎಂಜಿನಿಯರ್‌ ಸೋಮಶೇಖರ್‌ ನಾಯಕ್‌ ಹಾಗೂ ಬಸವೇಶ್ವರನಗರದ ನಿವಾಸಿ ವಿಜಯಕುಮಾರಿ ಎಂದು ಗುರುತಿಸಲಾಗಿದೆ.

ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಹಾಗೂ ಮತ್ತೊಬ್ಬ ಆರೋಪಿ ಅಜಯ್‌ ಜೋಶಿ ತಲೆಮರೆಸಿಕೊಂಡಿದ್ದು, ಶೋಧ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗೋಪಾಲ ಜೋಶಿ ಅವರ ಕುಟುಂಬದ ಸ್ನೇಹಿತೆ ವಿಜಯಕುಮಾರಿ ಅವರ ಮನೆಯಲ್ಲಿ ಶೋಧ ನಡೆಸಲಾಗಿದ್ದು, ಕೆಲವು ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಗೋಪಾಲ ಜೋಶಿ ಅವರಿಗೆ ಸೇರಿದ ಕೆಲವು ಸ್ಥಳಗಳಲ್ಲೂ ಪರಿಶೀಲನೆ ನಡೆಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ದೇವಾನಂದ್‌ ಚವ್ಹಾಣ್‌ ಅವರು ಗೋಪಾಲ ಜೋಶಿ ಅವರನ್ನು ಹುಬ್ಬಳ್ಳಿಯ ನಿವಾಸದಲ್ಲಿ ಭೇಟಿ ಮಾಡಿದ್ದರು. ಸೋಮಶೇಖರ್ ನಾಯಕ್ ಭೇಟಿ ಮಾಡಿಸಿದ್ದರು. ಕೇಂದ್ರದಲ್ಲಿ ನನ್ನ ಸಹೋದರ ಪ್ರಲ್ಹಾದ ಜೋಶಿ ಅವರ ವರ್ಚಸ್ಸು ಚೆನ್ನಾಗಿದ್ದು, ವಿಜಯಪುರ ಕ್ಷೇತ್ರದಿಂದ ಬಿಜೆಪಿ ಟೆಕೆಟ್‌ ಕೊಡಿಸುವುದಾಗಿ ಗೋಪಾಲ ಜೋಶಿ ಆಮಿಷವೊಡ್ಡಿದ್ದರು. ಇದಕ್ಕಾಗಿ ರೂಪಾಯಿ 5 ಕೋಟಿ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೂಚಿಸಿದ್ದರು. ಅಷ್ಟು ಹಣವಿಲ್ಲ ಎಂದಾಗ ಸದ್ಯಕ್ಕೆ ರೂ. 25 ಲಕ್ಷ ಕೊಡುವಂತೆ ತಿಳಿಸಿದ್ದರು. ಆ ಹಣವನ್ನು ಗೋಪಾಲ ಜೋಶಿ ಅವರು ಸೂಚಿಸಿದ ವಿಜಯಕುಮಾರಿ ಅವರ ಮನೆಗೆ ತಲುಪಿಸಲಾಗಿತ್ತು. ಅಲ್ಲದೇ ರೂ. 5 ಕೋಟಿ ಮೌಲ್ಯ ನಮೂದಿಸಿದ್ದ ಚೆಕ್‌ ಸಹ ಪಡೆದುಕೊಂಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.