ಯೋಗೇಶ್ವರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ವಿಚಾರವನ್ನು ತಳ್ಳಿ ಹಾಕುವಂತಿಲ್ಲ.
ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಘೋಷಣೆ ವಿಚಾರ ಕಾಂಗ್ರೆಸ್ ಹಾಗೂ ಮೈತ್ರಿ ಪಕ್ಷಗಳಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಚ್ಚರಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದ್ದು, ಉಪಚುನಾವಣೆ ಕಾವೇರತೊಡಗಿದೆ.
ಶನಿವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಜೆಡಿಎಸ್-ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಎನ್ಡಿಎ ಅಭ್ಯರ್ಥಿ ಗೆಲ್ಲಿಸುವ ವಿಚಾರವಾಗಿಯೇ ಪ್ರಮುಖವಾಗಿ ಚರ್ಚಿಸಲಾಗಿದೆ. ಸಿ.ಪಿ. ಯೋಗೇಶ್ವರ್ ಸ್ಪರ್ಧೆ ಕುರಿತಂತೆ ಚರ್ಚೆ ನಡೆದರೂ ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡದಿರಲು ಜೆಡಿಎಸ್ ಪಟ್ಟು ಹಿಡಿದಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ಸಂಜೆ ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ. ಈಗಾಗಲೇ ಹುಬ್ಬಳ್ಳಿ ಕಡೆ ಪ್ರಯಾಣ ಬೆಳೆಸಿದ್ದಾರೆಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಬಿಜೆಪಿ ಅಥವಾ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಇಂಗಿತವನ್ನು ಯೋಗೇಶ್ವರ್ ವ್ಯಕ್ತಪಡಿಸಿದ್ದರು. ಆದರೆ, ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡಲು ಒಪ್ಪದ ಜೆಡಿಎಸ್, ನಿಖಿಲ್ ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಚುನಾವಣಾ ಕಣಕ್ಕೆ ಇಳಿಸುವ ಸಾಧ್ಯತೆ ಇರುವುದರಿಂದ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರಿ, ದಳಪತಿಗಳ ವಿರುದ್ಧ ತೊಡೆತಟ್ಟಲಿದ್ದಾರೆ ಎಂದು ತಿಳಿದುಬಂದಿದೆ.
ಯೋಗೇಶ್ವರ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೋ, ಇಲ್ಲವೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೋ ಎಂಬುದು ಅ.24 ರಂದು ಕರೆದಿರುವ ಬೆಂಬಲಿಗರ ಸಭೆ ಬಳಿಕ ತೀರ್ಮಾನವಾಗಲಿದೆ.

ಎರಡು ದಿನದಲ್ಲಿ ಅಭ್ಯರ್ಥಿ ಕುರಿತು ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಸಿ.ಪಿ.ಯೋಗೇಶ್ವರ್ ಎರಡು ಬಾರಿ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಯೋಗೇಶ್ವರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ವಿಚಾರವನ್ನು ತಳ್ಳಿ ಹಾಕುವಂತಿಲ್ಲ.
