ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಸಹಜ ಸಾವುಗಳು, ಅತ್ಯಾಚಾರ, ಕೊಲೆ, ಭೂ ಮಾಫಿಯಾ, ಮೈಕ್ರೋ ಫೈನಾನ್ಸ್ ದೌರ್ಜನ್ಯಗಳ ಬಗ್ಗೆ ತನಿಖೆಗೆ ಒತ್ತಾಯಿಸಿ ಸೆಪ್ಟೆಂಬರ್ 25 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ನ್ಯಾಯ ಸಮಾವೇಶ ನಡೆಯಲಿದೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಎಲ್ಲಾ ಅಸಹಜ ಸಾವುಗಳು , ಅತ್ಯಾಚಾರ, ಕೊಲೆ ಪ್ರಕರಣಗಳನ್ನು ಎಸ್ಐಟಿ ತನಿಖೆಗೆ ಒಳಪಡಿಸಬೇಕು, ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಭೂ ಮಾಫಿಯಾ, ಮೈಕ್ರೋ ಫೈನಾನ್ಸ್ ಅಕ್ರಮ, ದೌರ್ಜನ್ಯಗಳ ಬಗ್ಗೆ ತನಿಖೆಗೆ ಪ್ರತ್ಯೇಕ ಸಮಿತಿ ರಚಿಸಬೇಕು, ಎಸ್ಐಟಿ ತಂಡಕ್ಕೆ ಪೂರ್ಣ ಸ್ವಾತಂತ್ರ್ಯ ನೀಡಬೇಕು ಮತ್ತು ಎಸ್ಐಟಿ ತನಿಖೆಯನ್ನು ಹಾದಿ ತಪ್ಪಿಸುವ ರಾಜಕೀಯ ಷಡ್ಯಂತ್ರಗಳನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿ ರಾಜ್ಯದ ಎಡ, ದಲಿತ, ಆದಿವಾಸಿ,ಕಾರ್ಮಿಕ, ರೈತ, ವಿದ್ಯಾರ್ಥಿ, ಯುವಜನ, ಮಹಿಳಾ, ಸಾಂಸ್ಕೃತಿಕ ಸಂಘಟನೆಗಳ ಜಂಟಿ ವೇದಿಕೆಯಾದ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ನೇತೃತ್ವದಲ್ಲಿ ಈ ನ್ಯಾಯ ಸಮಾವೇಶ ಸಪ್ಟೆಂಬರ್ 25 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಖ್ಯಾತ ಹೋರಾಟಗಾರ್ತಿ, ಮಾಜಿ ಸಂಸದೆ ಸುಭಾಷಿನಿ ಅಲಿ ಭಾಗವಹಿಸಲಿದ್ದು, ಜಿಲ್ಲೆಯ ನ್ಯಾಯಪ್ರೀಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ, ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ವಿನಂತಿಸಿದ್ದಾರೆ.
