ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (ಆರ್ಟಿಒ) ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಹೊಣೆಯಾಗಿಸಿ ಅವರನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರ್ಟಿಒನಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಪರವಾನಗಿ, ಕಲಿಕಾ ಪರವಾನಗಿ ಸೇರಿದಂತೆ 24 ಸೇವೆಗಳನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಅವಕಾಶ ಕಲ್ಪಿಸುವಂತೆ ಮಾಡಲಾಗಿದೆ. ಆದಾಗ್ಯೂ ಆರ್ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳು ಇರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಜವಾಬ್ದಾರಿಯನ್ನಾಗಿ ಮಾಡಿ ಅಮಾನತುಗೊಳಿಸಲಾಗುವುದು ಎಂದರು.
ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಕಚೇರಿಯ ಅಧಿಕಾರಿ ಅಥವಾ ಸಿಬ್ಬಂದಿಗಳನ್ನು ಭೇಟಿ ಮಾಡಿ, ಅವರ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ಆರ್ಟಿಒ ಕಚೇರಿಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
