ಪೊಲೀಸರಿಗೆ ಶುಭ ಶುದ್ದಿ, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಪೊಲೀಸ್ ಅಧಿಕಾರಿಗಳ, ಸಿಬ್ಬಂದಿಗಳ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡುವಂತೆ ಕರ್ನಾಟಕ ಸರ್ಕಾರ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಪತ್ರದಲ್ಲಿ ಸೂಕ್ತ ಕ್ರಮಕ್ಕೆ ಸೂಚಿಸಿದೆ. ಈ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ರಾಜ್ಯದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸಮಾಜದ ಸದಸ್ಯರಾದಂತ ಮೋಹನ್ ಕುಮಾರ್ ದಾನಪ್ಪ ಎಂಬುವರು ಪತ್ರವನ್ನು ಬರೆದಿರುವುದನ್ನು ಉಲ್ಲೇಖಿಸಿದ್ದಾರೆ.
ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ನಿಂದ ಎಎಸ್‌ಐ ದರ್ಜೆಯವರೆಗಿನ ಸಿಬ್ಬಂದಿಗಳ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕಡ್ಡಾಯ ರಜೆ ನೀಡುವಂತೆ ಕೋರಿರುವುದಾಗಿ ತಿಳಿಸಿದ್ದಾರೆ. ಈ ಪತ್ರದ ಬಗ್ಗೆ ನಿಯಮಾನುಸಾರ ಮುಂದಿನ ಕ್ರಮ ವಹಿಸುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಿರ್ದೇಶಿಸಿದ್ದಾರೆ.
