ಬೆಳ್ತಂಗಡಿ: ಯಾವುದೆ ಪರವಾನಿಗೆ ಪಡೆಯದೆ ಅಕ್ರಮ ಕಟ್ಟಡ ನಿರ್ಮಾಣ; ದ. ಕ ಜಿಲ್ಲಾ ಉಸ್ಸುವಾರಿ ಸಚಿವರಿಗೆ ದೂರು

ಕರಾವಳಿ

ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರ್ಕಾರಕ್ಕೆ ವಂಚಿಸಿ, ಸಂಬಂಧ ಪಟ್ಟ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದೆ ಅನಧಿಕೃತವಾಗಿ ಬಹು ಮಹಡಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಮಾಜಿಕ ಕಾರ್ಯಕರ್ತ ಶೇಖರ್. ಲಾಯಿಲ ಮನವಿ ಸಲ್ಲಿಸಿದ್ದಾರೆ.

ಇಂದು ಕುಕ್ಕೇಡಿ ಡಾ.ಬಿ.ಆರ್ ಅಂಬೇಡ್ಕರ್ ಭವನದ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಭ್ಯಾಸ್ ಕಾಲೇಜ್, ಕರಿಮೆಣೇಲು ಗ್ರಾಮದ ಬ್ರೈಟ್ ಹಾರಿಜಾನ್ ಇಂಟರ್ ನ್ಯಾಷನಲ್ ಸ್ಕೂಲ್ ಮತ್ತು ಬೆಸ್ಟ್ ವಸತಿ ಶಾಲೆ, ಕುವೆಟ್ಟು ಗ್ರಾಮದ ವಿದ್ವತ್ ಕಾಲೇಜ್, ಶೆಣೈ ರೆಸ್ಟೋರೆಂಟ್ ಕಟ್ಟಡಗಳು ಸ್ಥಳೀಯಾಡಳಿತ ಸೇರಿದಂತೆ ಸಂಬಂಧಿಸಿದ ಯಾವುದೇ ಇಲಾಖೆಯಿಂದ ಯಾವುದೇ ರೀತಿಯ ಅನುಮತಿ ಪಡೆಯದೇ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ವಂಚಿಸಿ ಅಕ್ರಮ ಕಟ್ಟಡ ನಿರ್ಮಾಣ ಮಾಡಲಾಗಿದೆ.

ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದರೂ , ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ರಾತ್ರಿ ಸಮಯ ಹಾಗೂ ಸರ್ಕಾರಿ ರಜಾ ದಿನಗಳಲ್ಲಿ ಕಟ್ಟಡ ನಿರ್ಮಾಣದ ಕಾಮಗಾರಿಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸ್ಥಳೀಯಾಡಳಿತದ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿದ್ದರೂ, ಸಂಬಂಧಪಟ್ಟ ಇಲಾಖೆಗಳು ಮೌನವಹಿಸಿದೆ ಎಂದು ಮನವಿಯಲ್ಲಿ ಶೇಖರ್ ಲಾಯಿಲ ಆರೋಪಿಸಿದ್ದಾರೆ.